ಸೋಮವಾರಪೇಟೆ, ಸೆ.20: ಕೊಡಗು ವೀರಶೈವ ಸಮಾಜ ಸೇರಿದಂತೆ ಸಕಲೇಶಪುರ, ಆಲೂರು ಹಾಗೂ ಬೇಲೂರು ವ್ಯಾಪ್ತಿಯ ಮಲೆನಾಡು ವೀರಶೈವ ಸಮಾಜಗಳ ವತಿಯಿಂದ ತಾ.21ರಂದು ತುಮಕೂರಿನಲ್ಲಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ ತಿಳಿಸಿದ್ದಾರೆ.

ತುಮಕೂರಿನ ಸಿದ್ಧಗಂಗಾ ಮಠದ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಲಿಂಗೈಕ್ಯ ಶ್ರೀಗಳ ಗದ್ದುಗೆಯಲ್ಲಿ ವಿಶೇಷ ಪೂಜೆ, ಅರ್ಚನೆ, ಮಹಾಮಂಗಳಾರತಿ ನಡೆಯಲಿದೆ. ನಂತರ ಧಾರ್ಮಿಕ ಸಮಾರಂಭ ಜರುಗಲಿದ್ದು, ನೂರಾರು ಮಠಾಧೀಶರು ಪಾಲ್ಗೊಳ್ಳಲಿದ್ದಾರೆ ಎಂದರು.

ಕಾರ್ಯಕ್ರಮದ ಹಿನ್ನೆಲೆ ಸದಾಶಿವ ಸ್ವಾಮೀಜಿ, ಮಹಾಂತ ಸ್ವಾಮೀಜಿ, ಜಿಲ್ಲಾ ವೀರಶೈವ ಮಹಾಸಭಾದ ಉಪಾಧ್ಯಕ್ಷ ಜಿ.ಎಂ. ಕಾಂತರಾಜು, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಮಹೇಶ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.