ಮಡಿಕೇರಿ, ಫೆ. 9: ಕುಶಾಲನಗರ ಪಟ್ಟಣ ವ್ಯಾಪ್ತಿಯ ಕಾವೇರಿ ನದಿ ಹೂಳೆತ್ತಲು ತಕ್ಷಣ ಅಂದಾಜು ಪಟ್ಟಿ ತಯಾರಿಸುವಂತೆ ಜಿಲ್ಲಾಧಿಕಾರಿಗಳು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕುಶಾಲನಗರ ಕಾವೇರಿ ನದಿ ಪ್ರವಾಹ ಸಂತ್ರಸ್ತರ ರಕ್ಷಣಾ ವೇದಿಕೆಯ ಪ್ರಮುಖರು ನದಿಯಲ್ಲಿ ಹೂಳು ತುಂಬಿರುವ ಬಗ್ಗೆ ಜಿಪಿಎಸ್ ಆಧಾರಿತ ಛಾಯಾಚಿತ್ರಗಳೊಂದಿಗೆ ಮನವಿ ಸಲ್ಲಿಸಿದ ಸಂದರ್ಭ ಭರವಸೆ ನೀಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಪ್ರಕೃತಿ ವಿಕೋಪದಡಿಯಲ್ಲಿ ಅಂದಾಜು 2 ಕೋಟಿ ವೆಚ್ಚದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಜಿಲ್ಲಾ ಆಡಳಿತ ಮೂಲಕ ಸಾಧ್ಯವಿದೆ. ಈ ನಿಟ್ಟಿನಲ್ಲಿ ವಾರದೊಳಗಾಗಿ ಅಂದಾಜು ಪಟ್ಟಿಯನ್ನು ತಯಾರಿಸಿ ವರದಿ ನೀಡುವಂತೆ ಹಾರಂಗಿ ಅಣೆಕಟ್ಟೆ ವಿಭಾಗದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭ ಕಾವೇರಿ ನದಿ ಪ್ರವಾಹ ಸಂತ್ರಸ್ತರ ರಕ್ಷಣಾ ವೇದಿಕೆಯ ಎಂ.ಎನ್. ಚಂದ್ರಮೋಹನ್, ಉಪಾಧ್ಯಕ್ಷ ತೋರೇರ ಉದಯಕುಮಾರ್, ಪ್ರಧಾನ ಕಾರ್ಯದರ್ಶಿ ವರದ, ಖಜಾಂಚಿ ಕೊಡಗನ ಹರ್ಷ, ಬಡಾವಣೆ ಪ್ರತಿನಿಧಿ ನಜೀರ್ ಅಹಮ್ಮದ್ ಇದ್ದರು.