ಕೂಡಿಗೆ, ಫೆ. 9: ಹಾರಂಗಿ ಅಣೆಕಟ್ಟೆಯ ಸಮೀಪದಲ್ಲಿ ನೀರಾವರಿ ಇಲಾಖೆಗೆ ಸೇರಿದ ಜಾಗದಲ್ಲಿ ಇರುವ ಪ್ರಾಥಮಿಕ ಆರೋಗ್ಯ ಉಪ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಆರೋಗ್ಯ ಸಚಿವ ಶ್ರೀರಾಮುಲು ಅವರು ಜಿಲ್ಲೆಗೆ ಆಗಮಿಸಿದ್ದ ಸಂದರ್ಭ ಈ ವಿಷಯವಾಗಿ ಕೂಡುಮಂಗಳೂರು ಗ್ರಾ.ಪಂ. ಸದಸ್ಯ ಭಾಸ್ಕರ್ ನಾಯಕ್, ಗ್ರಾಮಸ್ಥರಾದ ಗಿರೀಶ್, ಚೌಡಪ್ಪ ಹಾಗೂ ಮಧು ಮತ್ತಿತರರು ಹಾರಂಗಿ ಪ್ರಾಥಮಿಕ ಆರೋಗ್ಯ ಉಪ ಕೇಂದ್ರವನ್ನು ಇಲ್ಲಿನ ನಿವಾಸಿಗಳಿಗೆ ಅನುಕೂಲವಾಗುವಂತೆ ಮೇಲ್ದರ್ಜೆಗೇರಿಸುವಂತೆ ಮನವಿ ಪತ್ರ ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಆದಷ್ಟು ಬೇಗ ಮನವಿ ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.