ಮಡಿಕೇರಿ, ಅ. 12: ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿಯ ತಲಕಾವೇರಿ ತೀರ್ಥೋದ್ಭವ ಜಾತ್ರಾ ಮಹೋತ್ಸವವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ಮಾತ್ರವೇ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಲಕಾವೇರಿ ತೀರ್ಥೋದ್ಭವ ಜಾತ್ರಾ ಮಹೋತ್ಸವ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಮಾತನಾಡಿದರು.ಹಿಂದಿನ ವರ್ಷಗಳಿಗಿಂತ ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಮತ್ತು ಸರಳ ರೀತಿಯಲ್ಲಿ ತೀರ್ಥೋದ್ಭವ ಆಚರಿಸುವಂತಾಗಬೇಕು. ಹೆಚ್ಚು ಜನ ಸೇರಿದರೆ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು.ಜಿಲ್ಲೆಯ ಜನತೆ ಪ್ರಸ್ತುತ ಪರಿಸ್ಥಿಯನ್ನು ಅರ್ಥಮಾಡಿಕೊಂಡು ಪ್ರವಾಸಿಗರು, ಹಿರಿಯರು, ಮಕ್ಕಳು, ಗರ್ಭಿಣಿ ಮಹಿಳೆಯರು, ಇನ್ನಿತರ ಆರೋಗ್ಯ ಸಮಸ್ಯೆಯಿರುವವರು ಮನೆಯಿಂದಲೇ ಮಾಧ್ಯಮಗಳ ಮೂಲಕ ನೇರಪ್ರಸಾರ ವೀಕ್ಷಣೆ ಮಾಡುವಂತಾಗಬೇಕು.

ಕೋವಿಡ್-19 ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು ಮುಖ್ಯವಾಗಿದೆ. ತೀರ್ಥೋದ್ಭವ ಸಂದರ್ಭ ಹೆಚ್ಚಿನ ಜನ ಆಗಮಿಸಿದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಲಿದೆ.

ಈ ಸಂಬಂಧ ವೀರಾಜಪೇಟೆ ಕ್ಷೇತ್ರ ಶಾಸಕ ಕೆ.ಜಿ ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಈಗಾಗಲೇ ಸಭೆ ನಡೆದಿದ್ದು. ಸಭೆಯ ನಿರ್ಧಾರದಂತೆ ತೀರ್ಥೋದ್ಭವ ಜಾತ್ರಾ ಮಹೋತ್ಸವ ವನ್ನು ನಡೆಸಲಾಗುವುದು ಎಂದು ಹೇಳಿದರು.

ತಲಕಾವೇರಿ ಭಾಗಮಂಡಲ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತಮ್ಮಯ್ಯ ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿದಂತೆ ಕೋವಿಡ್-19 ಸಂಬಂಧ ಸರ್ಕಾರದ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಪಾಲಿಸ ಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಮಾತನಾಡಿ ಸ್ವಯಂ ಸೇವಕರು, ಪೂಜೆ ಸಲ್ಲಿಸುವ ಅರ್ಚಕರು ಭಾಗಮಂಡಲ ವ್ಯಾಪ್ತಿಯ ವರ್ತಕರು ಸೇರಿದಂತೆ ಮತ್ತಿತರರಿಗೆ ಜಾತ್ರಾ

(ಮೊದಲ ಪುಟದಿಂದ) ಮಹೋತ್ಸವಕ್ಕೂ ಮುಂಚಿತವಾಗಿ ಕೋವಿಡ್ ಪರೀಕ್ಷೆ ಯನ್ನು ಆರ್‍ಟಿಪಿಸಿಆರ್ ಮುಖಾಂತರ ನಡೆಸಬೇಕು. 2 ಮೊಬೈಲ್ ತಪಾಸಣಾ ಘಟಕವನ್ನು ಭಾಗಮಂಡಲಕ್ಕೆ ಕಳುಹಿಸುವ ಕಾರ್ಯವಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್ ಮಾತನಾಡಿ ತಾ. 14 ಮತ್ತು 15 ರಂದು ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲಿ ಕೋವಿಡ್ ಪರೀಕ್ಷಾ ಕಾರ್ಯ ನಡೆಸಲಾಗುವುದು ಎಂದು ತಿಳಿಸಿದರು.

ಭಾಗಮಂಡಲ ತಲಕಾವೇರಿ ಯಲ್ಲಿನ ಬೀದಿ ದೀಪಗಳನ್ನು ಸರಿಪಡಿಸಬೇಕು. ಲೋಕೋಪಯೋಗಿ ಇಲಾಖೆ ವತಿಯಿಂದ ಬಾಕಿ ಇರುವ ಕೆಲಸವನ್ನು ಶೀಘ್ರವೇ ಪೂರ್ಣ ಗೊಳಿಸಬೇಕು. ಇದರೊಂದಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ರಸ್ತೆ ಬದಿಯಲ್ಲಿರುವ ಮರಗಳನ್ನು 2 ದಿನಗಳ ಒಳಗಾಗಿ ತೆರವುಗೊಳಿಸುವಂತೆ ಜಿಲ್ಲ್ಲಾಧಿಕಾರಿ ಸೂಚನೆ ನೀಡಿದರು.

ಎಂದಿನಂತೆ ಸಾಮಾನ್ಯ ಮಾರ್ಗದ ಬಸ್‍ಗಳು ಸಂಚರಿಸಲಿವೆ. ಬಸ್‍ನಲ್ಲಿ ಮಿತಿಗಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಳ್ಳದಂತೆ ಚಾಲಕರು ಮತ್ತು ನಿರ್ವಾಹಕರಿಗೆ ಸೂಕ್ತ ನಿರ್ದೇಶನ ನೀಡುವಂತೆ ಜಿಲ್ಲಧಿಕಾರಿ ಅವರು ಮಡಿಕೇರಿ ಕೆಎಸ್‍ಆರ್‍ಟಿಸಿ ಘಟಕ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಉಪವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡೂ, ಮಡಿಕೇರಿ ತಹಶೀಲ್ದಾರ್ ಮಹೇಶ್, ಲೋಕೋಪಯೋಗಿ ಇಲಾಖೆಯ ಇಇ ಮದನ್ ಮೋಹನ್, ಎಇಇ ಶಿವರಾಂ, ಚೆಸ್ಕಾಂ ಇಇ ಸೋಮಶೇಖರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್, ಪೊಲೀಸ್ ಇನ್ಸ್‍ಪೆಕ್ಟರ್‍ಗಳಾದ ದಿವಾಕರ್, ಮೇದಪ್ಪ, ಅನೂಪ್ ಮಾದಪ್ಪ, ಮಡಿಕೇರಿ ಕೆಎಸ್‍ಆರ್‍ಟಿಸಿ ಘಟಕ ವ್ಯವಸ್ಥಾಪಕಿ ಗೀತಾ, ಭಗಂಡೇಶ್ವರ ತಲಕಾವೇರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ, ಭಾಗಮಂಡಲ ಪಿಡಿಒ ಅನಿತಾ, ತಕ್ಕ ಮುಖ್ಯಸ್ಥ ಕೋಡಿ ಮೋಟಯ್ಯ, ದೇವಾಲಯ ವ್ಯವಸ್ಥಾಪನಾ ಸಮಿತಿ ಸದಸ್ಯ ಎಸ್.ಎಂ ಕಾವೇರಪ್ಪ, ಉದಿಯಂಡ ಸುಭಾಷ್ ಇತರರು ಇದ್ದರು.