ಮಡಿಕೇರಿ, ಡಿ.16: ಮಾನವ ಮತ್ತು ಪ್ರಾಣಿ ಸಂಘರ್ಷ ಹಾಗೂ ನಕ್ಸಲ್ ಪೀಡಿತ ಪ್ರದೇಶ ವ್ಯಾಪ್ತಿಯಲ್ಲಿನ ಮತಗಟ್ಟೆಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವ ಸಂಬಂಧ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪೊಲೀಸ್, ಅರಣ್ಯ, ಕಂದಾಯ ಇಲಾಖೆ ಅಧಿಕಾರಿ ಗಳೊಂದಿಗೆ ಸಭೆ ನಡೆಯಿತು.
ಆನೆ ಮತ್ತು ಮಾನವ ಸಂಘರ್ಷ ಪ್ರದೇಶಗಳ ವ್ಯಾಪ್ತಿಯಲ್ಲಿನ ಮತಗಟ್ಟೆಗೆ ತೆರಳುವ ಅಧಿಕಾರಿಗಳಿಗೆ ರ್ಯಾಪಿಡ್ ರೆಸ್ಪಾನ್ಸ್ ತಂಡದ ಮೂಲಕ ಕರೆದು ಕೊಂಡು ಹೋಗಲು ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ನಕ್ಸಲ್ ಪೀಡಿತ ಪ್ರದೇಶ ವ್ಯಾಪ್ತಿಗಳಲ್ಲಿ ಎಎನ್‍ಎಫ್ ತಂಡದ ಮೂಲಕ ಸೂಕ್ತ ರಕ್ಷಣೆ ಒದಗಿಸುವುದು. ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆ ವ್ಯಾಪ್ತಿಯಲ್ಲಿನ ಮತಗಟ್ಟೆಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.
ಮತಗಟ್ಟೆ ಕೇಂದ್ರಗಳಲ್ಲಿ ಅಗತ್ಯ ಪೊಲೀಸರನ್ನು ನಿಯೋಜಿಸುವುದು. ಹಾಗೆಯೇ ಮತದಾನದ ಹಿಂದಿನ ದಿನ ಮತ್ತು ಮತದಾನದಂದು ಮತಗಟ್ಟೆ ಅಧಿಕಾರಿಗಳು, ಪೊಲೀಸರು, ಆರೋಗ್ಯ ಕಾರ್ಯಕರ್ತರು ಇತರರಿಗೆ ಊಟದ ವ್ಯವಸ್ಥೆಯನ್ನು ತಾ.ಪಂ. ಯಿಂದ ಮಾಡುವಂತೆ ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರಾ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಉಪ ವಿಭಾಗಾಧಿ ಕಾರಿ ಈಶ್ವರ ಕುಮಾರ್ ಖಂಡು, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್.ರೂಪ, ಉಪ ಅರಣ್ಯ ಸಂರಕ್ಷಣಾಧಿಕಾರಿ ನಿಲೇಶ್ ಸಿಂಧೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಚ್ಚಾಡೋ, ತಾ.ಪಂ.ಇಒ ಲಕ್ಷ್ಮೀ, ಜಯಣ್ಣ, ಶಿವಣ್ಣ, ಚುನಾವಣಾ ತಹಶೀಲ್ದಾರ್ ಕುಸುಮ, ತಹಶೀಲ್ದಾರ್ ಮಹೇಶ್, ಯೋಗಾ ನಂದ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ನೆಹರು, ದಯಾನಂದ, ಇತರರು ಹಲವು ಮಾಹಿತಿ ನೀಡಿದರು.
ಜಾಗೃತಿ ಅಭಿಯಾನಕ್ಕೆ ಚಾಲನೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಗ್ರಾಮೀಣ ಭಾಗದ ಮತದಾರರಲ್ಲಿ ‘ಮತದಾನದ ಮಹತ್ವ’ ಕುರಿತ ಜಾಗೃತಿ ಮೂಡಿಸುವ ಬೀದಿನಾಟಕ ಮತ್ತು ಜಾನಪದ ಸಂಗೀತ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಜಿಲ್ಲಾಡಳಿತ ಭವನದ ಆವರಣದಲ್ಲಿ ಚಾಲನೆ ನೀಡಿದರು.
ಜಿಲ್ಲೆಯ ಮೂರು ತಾಲೂಕಿನ ಆಯ್ದ ಗ್ರಾ.ಪಂ.ವ್ಯಾಪ್ತಿಯಲ್ಲಿ 10 ದಿನಗಳ ಕಾಲ ಬೀದಿನಾಟಕ ಮತ್ತು ಸಂಗೀತ ಕಾರ್ಯಕ್ರಮದ ಮೂಲಕ ‘ಮತದಾನದ ಮಹತ್ವ’ ಕುರಿತು ಜಾಗೃತಿ ಅಭಿಯಾನ ನಡೆಯಲಿದೆ ಎಂದು ವಾರ್ತಾಧಿಕಾರಿ ಚಿನ್ನಸ್ವಾಮಿ ತಿಳಿಸಿದರು. ಕಲಾವಿದ ರಾಜು ಮತ್ತು ತಂಡದವರು ಮತದಾನದ ಮಹತ್ವ ಕುರಿತು ಜಾಗೃತಿ ಗೀತೆ ಹಾಡಿದರು.