ಮಡಿಕೇರಿ, ಡಿ.17: ಮಕ್ಕಳ ಮೇಲಿನ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಪರಶುರಾಮ ಮತ್ತು ಮೈಸೂರು ಒಡನಾಡಿ ಸೇವಾ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ ಅವರು ಪ್ರತಿಪಾದಿಸಿದ್ದಾರೆ.
ನಗರದ ಭಾರತೀಯ ವಿದ್ಯಾಭವನದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಗುರುವಾರ ನಡೆದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಮತ್ತು ಬಾಲ್ಯ ವಿವಾಹವನ್ನು ತಡೆಯಬೇಕು ಎಂದು ಅವರು ಹೇಳಿದರು.
ಮೈಸೂರು ಒಡನಾಡಿ ಸೇವಾ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ ಅವರು ಮಾತನಾಡಿ ಮಕ್ಕಳ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರಲ್ಲೂ ತಿಳುವಳಿಕೆ ಇದ್ದಾಗ ಬಾಲ್ಯವಿವಾಹ, ಮಕ್ಕಳ ಮೇಲಿನ ದೌರ್ಜನ್ಯ ನಿಯಂತ್ರಿಸ ಬಹುದು ಎಂದರು.
ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು. ಸಾಂಸ್ಕøತಿಕ ಮತ್ತು ಸಾಮಾಜಿಕ ಹಿನ್ನೆಲೆಯಿಂದ ಮಕ್ಕಳ ಹಕ್ಕುಗಳು ಕೆಲವು ಸಂದರ್ಭದಲ್ಲಿ ಉಲ್ಲಂಘನೆಯಾಗುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಎಷ್ಟೇ ಅರಿವು ಮೂಡಿಸಿದರು ಸಾಲದು ಎಂದು ಸ್ಟ್ಯಾನ್ಲಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಫೋಕ್ಸೋ ಕಾಯಿದೆಯಡಿ ಜೈಲಿಗೆ ಹೋದರೆ ಒಂದು ವರ್ಷ ದೊಳಗೆ ಹೊರಗೆ ಬರುವುದು ಅಸಾಧ್ಯ. ಆದ್ದರಿಂದ ಈ ಬಗ್ಗೆ ಹೆಚ್ಚಿನ ಜ್ಞಾನ ಅಗತ್ಯ ಎಂದು ಮಕ್ಕಳಿಗೆ ತಿಳುವಳಿಕೆ ಹೇಳಬೇಕು. ಫೋಕ್ಸೋ ಕಾಯಿದೆ ಸಂಬಂಧಿಸಿದಂತೆ ಆಂದೋಲನ ಮಾದರಿಯಲ್ಲಿ ಅರಿವು ಕಾರ್ಯಕ್ರಮ ನಡೆಯಬೇಕು ಎಂದು ಸ್ಟ್ಯಾನ್ಲಿ ಅವರು ಹೇಳಿದರು.
ಆಚಾರ-ವಿಚಾರ ಸಂಪ್ರದಾಯ, ಮೌಢ್ಯಗಳ ಹೆಸರಿನಲ್ಲಿ ಬಾಲ್ಯವಿವಾಹ ಮತ್ತಿತರ ದೌರ್ಜನ್ಯಗಳು ನಡೆಯುತ್ತಿವೆ. ಇದು ನಿಲ್ಲಬೇಕು ಎಂದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಪರಶುರಾಮ ಅವರು ಮಾತನಾಡಿ ಮಕ್ಕಳ ಮೇಲಿನ ದೌರ್ಜನ್ಯಕ್ಕೆ ನಾನಾ ರೀತಿಯ ಕಾರಣಗಳು ಇದ್ದು, ಅಲ್ಲಿನ ಪರಿಸರ, ವಾಸಸ್ಥಾನ, ಸಂಕೀರ್ಣ ಮೊದಲಾದ ವುಗಳಾಗಿವೆ ಎಂದರು. ಆದರೆ ಈ ನೆಪದಲ್ಲಿ ಕಾನೂನು ಉಲ್ಲಂಘಿಸಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಪರಶುರಾಮ ಅವರು ಎಚ್ಚರಿಸಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಬಿ.ಎಸ್.ಕುಮಾರಿ ಅವರು ಇತ್ತೀಚಿನ ದಿನಗಳಲ್ಲಿ ನಿರಪರಾದಿ üಗಳಿಗೂ ಸಹ ಶಿಕ್ಷೆಯಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಆದಿವಾಸಿಗಳ ಆಚಾರ-ವಿಚಾರ, ಸಂಪ್ರದಾಯಗಳನ್ನು ಗೌರವಿಸಬೇಕು. ಆದರೆ ಈ ನೆಪದಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆಯಬಾರದು. ಶಿಕ್ಷಣದ ಮಹತ್ವ ಕುರಿತು ಆದಿವಾಸಿಗಳಲ್ಲಿ ಅರಿವು ಮೂಡಿಸಬೇಕು. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಅಬ್ದುಲ್ ಲತೀಪ್ ಅವರು ಮಾತನಾಡಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಹಂತದಲ್ಲಿಯೇ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಶಾಲೆಯನ್ನು ಏಕೆ ಬಿಡುತ್ತಾರೆ ಎಂಬುದು ತಿಳಿಯುತ್ತಿಲ್ಲ ಎಂದು ಅವರು ಹೇಳಿದರು.
ಮಕ್ಕಳ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರಲ್ಲೂ ಮಾಹಿತಿಯ ಪ್ರಜ್ಞೆ ಇರಬೇಕು. ಜಿಲ್ಲೆಯ ಪ್ರತೀ ಹಾಡಿಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಶಿಕ್ಷಣ ಮತ್ತು ಆರೋಗ್ಯದ ಮಹತ್ವ ಬಗ್ಗೆ ತಿಳುವಳಿಕೆ ಮೂಡಿಸಬೇಕು. ಫೋಕ್ಸೋ ಕಾಯಿದೆ ಬಗ್ಗೆ ಮಾಹಿತಿ ನೀಡಬೇಕು ಎಂದು ಅವರು ಹೇಳಿದರು.
ಬಾಲನ್ಯಾಯ ಮಂಡಳಿ ಸದಸ್ಯರಾದ ಅಬ್ದುಲ್ ರಿಯಾಜ್ ಅವರು ಮಾತನಾಡಿ ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಬೇಕು. ಹೊರ ಜಿಲ್ಲೆ, ಹೊರ ರಾಜ್ಯ ಮತ್ತು ಹೊರ ದೇಶದಿಂದ ಜಿಲ್ಲೆಗೆ ಬರುವವರು ಮಕ್ಕಳ ರಕ್ಷಣೆ ಬಗ್ಗೆ ಗಮನಹರಿಸಬೇಕು ಎಂದು ಅವರು ಸಲಹೆ ಮಾಡಿದರು.
ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಉಷಾ ಅಯ್ಯಣ್ಣ, ನಮಿತಾ ರಾವ್, ನಿಕಟ ಪೂರ್ವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರವೀಂದ್ರ ಇತರರು ಇದ್ದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಟಿ.ಎಸ್.ಅರುಂಧತಿ ಸ್ವಾಗತಿಸಿದರು. ಬಾಲಕಿಯರ ಬಾಲಮಂದಿರದ ಮಕ್ಕಳು ಪ್ರಾರ್ಥಿಸಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಚಿನ್ ಸುವರ್ಣ ನಿರೂಪಿಸಿದರು. ಇರ್ಷಾದ್ ಗೂನಡ್ಕ ವಂದಿಸಿದರು.