ಸಿದ್ದಾಪುರ, ಜೂ. ೧೮: ಪ್ರವಾಹ ಪೀಡಿತ ಪ್ರದೇಶಗಳಿಗೆ ಕಂದಾಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸಿದ್ದಾಪುರದ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಾದ ಅಮ್ಮತ್ತಿ ಹೋಬಳಿ ವ್ಯಾಪ್ತಿಗೆ ಒಳಪಡುವ ಕೊಂಡAಗೇರಿ, ಕರಡಿಗೋಡು, ಗುಹ್ಯ ಗ್ರಾಮದ ನದಿತೀರಕ್ಕೆ ವೀರಾಜಪೇಟೆ ತಾಲೂಕು ತಹಶೀಲ್ದಾರ್ ಯೋಗಾನಂದ್ ಅವರ ಮಾರ್ಗದರ್ಶನದ ಮೇರೆಗೆ ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕಿ ಭಾನುಪ್ರಿಯ ಹಾಗೂ ಗ್ರಾಮಲೆಕ್ಕಿಗ ಓಮಪ್ಪ ಬಣಾಕರ್ ಅವರು ನದಿತೀರದ ನಿವಾಸಿಗಳ ಸಮಸ್ಯೆಗಳನ್ನು ಪರಿಶೀಲಿಸಿದರು. ನದಿಯಲ್ಲಿ ನೀರು ಮತ್ತಷ್ಟು ಏರಿಕೆಯಾದಲ್ಲಿ ಈಗಾಗಲೇ ಜಿಲ್ಲಾಡಳಿತ ಗುರುತಿಸಿರುವ ಕಾಳಜಿ ಕೇಂದ್ರಗಳಿಗೆ ತೆರಳಬೇಕಾಗುತ್ತದೆ ಎಂದು ಮಾಹಿತಿ ನೀಡಿದರು. ಈಗಾಗಲೇ ನದಿತೀರದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಂದಾಯ ಇಲಾಖೆಯ ವತಿಯಿಂದ ನೋಟೀಸ್ ಜಾರಿ ಮಾಡಲಾಗಿದೆ. ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದ್ದಂತೆ ನದಿ ತೀರದ ನಿವಾಸಿಗಳಿಗೆ ಪ್ರವಾಹ ಭೀತಿ ಎದುರಾಗಿದ್ದು, ನೀರಿನ ಹೊಡೆತಕ್ಕೆ ನದಿ ದಡ ಕುಸಿಯುತ್ತಿದೆ. ಈಗಾಗಲೇ ಕಳೆದ ೨ ವರ್ಷಗಳಿಂದ ಪ್ರವಾಹಕ್ಕೆ ಸಿಲುಕಿ ನೂರಾರು ಮನೆಗಳು ನೆಲಸಮಗೊಂಡು ಹಲವು ಮನೆಗಳು ಶಿಥಿಲಗೊಂಡು ಬಿರುಕು ಬಿಟ್ಟಿದ್ದು, ನದಿತೀರದಲ್ಲಿ ಹಲವಾರು ನಿವಾಸಿಗಳು ಶೆಡ್‌ನಲ್ಲಿ ವಾಸಮಾಡಿಕೊಂಡು ಶಾಶ್ವತ ಸೂರಿನ ನಿರೀಕ್ಷೆಯಲ್ಲಿದ್ದಾರೆ.

-ವಾಸು ಎ.ಎನ್.