ಮಡಿಕೇರಿ, ಸೆ. ೪ : ರೈತ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಪ್ರಸಕ್ತ ಸಾಲಿನಿಂದ ಜಾರಿಗೆ ತರುತ್ತಿರುವ ಹೊಸ ಶಿಷ್ಯವೇತನ ಯೋಜನೆ ಕಾರ್ಯಕ್ರಮವನ್ನು ತಾ. ೫ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಚಾಲನೆ ನೀಡಲಿದ್ದಾರೆ.

ನೇರ ಪ್ರಸಾರವನ್ನು ಕೃಷಿ ಇಲಾಖೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಣೆ ಮಾಡಬಹುದೆಂದು ಕೃಷಿ ಇಲಾಖೆ ತಿಳಿಸಿದೆ.

ಮೆಟ್ರಿಕ್ ವಿದ್ಯಾಭ್ಯಾಸ ಪೂರ್ಣಗೊಳಿಸಿ ಅಧಿಕೃತ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳಲ್ಲಿ ಪಿಯುಸಿ, ವಿಶ್ವ ವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವ ರೈತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ರೂ.೨,೫೦೦ ರಿಂದ ರೂ.೧೧,೦೦೦ ವರೆಗೆ ನೇರ ನಗದು ವರ್ಗಾವಣೆ ಮೂಲಕ ವಾರ್ಷಿಕ ಶಿಷ್ಯ ವೇತನ ಪಾವತಿ ಮಾಡುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ. ಮುಖ್ಯಮಂತ್ರಿ ಅವರು ಸೆ.೫ ರಂದು ಉದ್ಘಾಟಿಸಲಿರುವ ಈ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಜಿಲ್ಲೆಯ ರೈತ ಕುಟುಂಬದ ಐವರು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಜಿಲ್ಲೆಯ ಎಲ್ಲಾ ರೈತರು ನೇರ ಪ್ರಸಾರ ಕಾರ್ಯಕ್ರಮವನ್ನು ಕೃಷಿ ಇಲಾಖೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿಯೂ ವೀಕ್ಷಣೆ ಮಾಡಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರಾದ ಶಬನಾ ಎಂ.ಶೇಕ್ ಅವರು ತಿಳಿಸಿದ್ದಾರೆ.