ಸುಜಾ ಕುಶಾಲಪ್ಪ

ವೀರಾಜಪೇಟೆ, ಅ. ೨೭ ಸರ್ಕಾರ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದ್ದು ಸಾರ್ವಜನಿಕರು ಅದರ ಉಪಯೋಗ ಪಡೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಹೇಳಿದರು.

ಪಟ್ಟಣದ ಗೋಣಿಕೊಪ್ಪ ರಸ್ತೆಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಸಮೀಪ ಕರ್ನಾಟಕ ವನ್ ಸಮಗ್ರ ಸೇವಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರ ಉಪಯೋಗಕ್ಕಾಗಿ ಎಲ್ಲಾ ದಾಖಲೆಗಳು ಒಂದೇ ಕಡೆಯಲ್ಲಿ ಲಭಿಸುವ ನಿಟ್ಟಿನಲ್ಲಿ ಸರ್ಕಾರ ಇಂತಹ ಯೋಜನೆಗಳನ್ನು ಜಾರಿಗೆ ತಂದಿದೆ. ಗ್ರಾಮ ಮಟ್ಟದಲ್ಲಿ ಗ್ರಾಮ ವನ್ ರೀತಿಯಲ್ಲಿ ಪಟ್ಟಣ ಪ್ರದೇಶಗಳಲ್ಲಿ ಕರ್ನಾಟಕ ವನ್ ಕೇಂದ್ರಗಳನ್ನು ಪ್ರಾರಂಭಿಸಿದೆ ಎಂದು ಹೇಳಿದರು. ತಹಶೀಲ್ದಾರ್ ಹೆಚ್.ಎನ್ ರಾಮಚಂದ್ರ ಮಾತನಾಡಿ, ಸರ್ಕಾರದ ಆದೇಶದಂತೆ ಪುರಸಭೆ ವ್ಯಾಪ್ತಿಯಲ್ಲಿ ಕರ್ನಾಟಕ ವನ್ ಕೇಂದ್ರವನ್ನು ಪ್ರಾರಂಭಿಸಬೇಕು ಎನ್ನುವ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸಲಾಗಿತ್ತು. ಜಿಲ್ಲಾಧಿಕಾರಗಳ ಅನುಮೋದನೆ ಮೇರೆಗೆ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಸರ್ಕಾರ ನಿಗದಿಪಡಿಸಿದ ದರವನ್ನು ಮಾತ್ರ ಪಡೆದುಕೊಂಡು ಸಾರ್ವಜನಿಕರಿಂದ ಯಾವುದೇ ದೂರು ಬಾರದ ರೀತಿಯಲ್ಲಿ ಪಾರದರ್ಶಕವಾಗಿ ಕಾರ್ಯನಿರ್ವಹಿಸುವಂತೆ ಕಿವಿಮಾತು ಹೇಳಿದರು.

ಈ ಸಂದರ್ಭ ಗ್ರೇಡ್ ೨ ತಹಶೀಲ್ದಾರ್ ಪ್ರದೀಪ್‌ಕುಮಾರ್, ಕಂದಾಯ ನಿರೀಕ್ಷಕ ಎಂ.ಎಲ್. ಹರೀಶ್, ಪುರಸಭೆ ವ್ಯವಸ್ಥಾಪಕಿ ಸುಜಾತ, ಕರ್ನಾಟಕ ವನ್ ಸಂಯೋಜಕ ಸುನೀಲ್ ಶೆಟ್ಟಿ, ಪ್ರವೀಣ್ ಚಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.