ಕುಶಾಲನಗರ, ಅ .೨೭ : ಇಲ್ಲಿಗೆ ಸಮೀಪದ ಕೊಪ್ಪ ಗ್ರಾಮ ಪಂಚಾಯಿತಿಗೆ ಸೇರಿದ ವಾಣಿಜ್ಯ ಮಳಿಗೆಗಳಲ್ಲಿ ಅಕ್ರಮವಾಗಿ ಕೋಳಿ, ಕುರಿ ಮಾಂಸ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು, ಅಧಿಕಾರಿ ಸಿಬ್ಬಂದಿಗಳು ಪರಿಶೀಲಿಸಲು ಬಂದ ಸಂದರ್ಭ ಕೆಲವು ವ್ಯಾಪಾರಿಗಳು ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ನಡೆದಿದೆ.
ಬಿ.ಎಂ. ರಸ್ತೆಯಲ್ಲಿ ಕೊಪ್ಪ ಗ್ರಾಮ ಪಂಚಾಯಿತಿಗೆ ಸೇರಿದ ಮೂರು ಕೋಳಿ ಮತ್ತು ಒಂದು ಕುರಿ ಮಾಂಸ ಮಳಿಗೆಗಳಲ್ಲಿ ಟೆಂಡರ್ ಅವಧಿ ಮುಗಿದು ಒಂದು ತಿಂಗಳು ಕಳೆದರೂ, ತೆರವುಗೊಳಿಸದ ಹಿನ್ನೆಲೆಯಲ್ಲಿ ಪಂಚಾಯಿತಿ ಆಡಳಿತ ಮಂಡಳಿ ಮತ್ತು ತಾಲೂಕು ಕಾರ್ಯನಿರ್ವಾಹಕ ಕಚೇರಿಯಿಂದ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು.
ಈ ಸಂಬAಧ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಣಯ ಕೈಗೊಂಡು ಲೈಸೆನ್ಸ್ ಆಧಾರದಲ್ಲಿ ಮಾಂಸ ಮಾರಾಟಕ್ಕೆ ಅನುಮತಿ ನೀಡುವಂತೆ ನಿರ್ಧರಿಸಲಾಗಿತ್ತು.
ಅದಕ್ಕೆ ಯಾವುದೇ ರೀತಿಯ ಸ್ಪಂದನ ನೀಡದೆ ಪಂಚಾಯಿತಿ ಮಳಿಗೆಯಲ್ಲಿ ಅನುಮತಿ ಇಲ್ಲದೆ ವ್ಯಾಪಾರ ಮುಂದುವರಿಸುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಅಂಗಡಿ ಮಳಿಗೆಗಳನ್ನು ತೆರವುಗೊಳಿಸಲು ನೋಟೀಸ್ ನೀಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತೀಶ್ ಕುಮಾರ್, ಪಂಚಾಯಿತಿ ಜನಪ್ರತಿನಿಧಿಗಳು ಮತ್ತು ಸಿಬ್ಬಂದಿಗಳೊAದಿಗೆ ಸ್ಥಳಕ್ಕೆ ಬಂದ ಸಂದರ್ಭ ಕೆಲವು ವ್ಯಾಪಾರಿಗಳು ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ವಾಗ್ವಾದ ನಡೆಸಿದ್ದಾರೆ.
ಈ ಸಂಬAಧ ಪಂಚಾಯಿತಿ ಅಧಿಕಾರಿಗಳು ಬೈಲುಕೊಪ್ಪ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಪೊಲೀಸರ ಸಹಕಾರದೊಂದಿಗೆ ಮಳಿಗೆಗಳನ್ನು ತೆರವುಗೊಳಿಸುವುದಾಗಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಸುನಿಲ್ ಕುಮಾರ್ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತೀಶ್ ಕುಮಾರ್ ತಿಳಿಸಿದ್ದಾರೆ.