ಕುಶಾಲನಗರ, ಅ. ೨೯: ಗ್ರಾಮ ಪಂಚಾಯಿತಿ ನೌಕರರ ಕನಿಷ್ಟ ವೇತನ ನಿಗದಿ ಹಾಗೂ ಪಿಂಚಣಿಗಾಗಿ ಒತ್ತಾಯಿಸಿ ನವೆಂಬರ್ ೭ ರಂದು ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ತಿಳಿಸಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಜಿಲ್ಲಾ ಪಂಚಾಯಿತಿ ಅನುಮೋದನೆಗಾಗಿ ಒತ್ತಾಯಿಸಿ ನವೆಂಬರ್ ೩ ರಂದು ಕೊಡಗು ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಧರಣಿ ನಡೆಸಿ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ಸ್, ನೀರು ಗಂಟಿಗಳು, ಜವಾನ, ಸ್ವಚ್ಛತಾಗಾರರನ್ನು ಏಕಕಾಲಕ್ಕೆ ಸರ್ಕಾರಿ ನೌಕರನಾಗಿ ಘೋಷಿಸಬೇಕು ಸೇರಿದಂತೆ ಹಲವು ಬೇಡಿಕೆ ಮುಂದಿರಿಸಲಾಗುವುದು ಎಂದರು. ನವೆಂಬರ್ ೩ ರಂದು ಜಿಲ್ಲಾ ಕೇಂದ್ರದಲ್ಲಿ ಅಧಿಕಾರಿಗಳಿಗೆ ಮನವಿ ಸಲ್ಲಿಕೆ, ನವೆಂಬರ್ ೭ ರಂದು ಬೆಂಗಳೂರು ರೈಲ್ವೆ ನಿಲ್ದಾಣದಿಂದ ಸ್ವಾತಂತ್ರö್ಯ ಉದ್ಯಾನವನ ತನಕ ಬೃಹತ್ ಮೆರವಣಿಗೆ ನಡೆಯಲಿದೆ ಎಂದು ಅವರು ಹೇಳಿದರು.
ಗೋಷ್ಠಿಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಕುಶಾಲನಗರ ತಾಲೂಕು ಖಜಾಂಚಿ ಅಮೀರ್, ಜಿಲ್ಲಾ ಸಮಿತಿ ಸದಸ್ಯರಾದ ರಂಗಸ್ವಾಮಿ ಮತ್ತು ಬಾಪು ಇದ್ದರು.