ಸೋಮವಾರಪೇಟೆ, ನ. ೨ : ಸರ್ಕಾರದ ಬಹುತೇಕ ಇಲಾಖೆಗಳಲ್ಲಿ ವ್ಯಾಪಕಗೊಳ್ಳುತ್ತಿರುವ ಭ್ರಷ್ಟಾಚಾರದ ವಿರುದ್ಧ ಸ್ವತಃ ನ್ಯಾಯಾಧೀಶರುಗಳೇ ರಸ್ತೆಯಲ್ಲಿ ಜಾಥಾ ನಡೆಸುವ ಮೂಲಕ ಭ್ರಷ್ಟಾಚಾರದ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯಿತಿಯ ಸಹಯೋಗದೊಂದಿಗೆ ಪಟ್ಟಣದಲ್ಲಿ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಅಂಗವಾಗಿ ಜಾಥಾ ನಡೆಯಿತು.
ಸೋಮವಾರಪೇಟೆ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಆದ ಕೆ. ಗೋಕುಲ್, ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಕೆ. ಗೋಪಾಲಕೃಷ್ಣ ಅವರುಗಳು ರಸ್ತೆಯಲ್ಲಿ ಸಂಚರಿಸಿ ಭ್ರಷ್ಟಾಚಾರದ ವಿರುದ್ಧ ಜಾಗೃತಿಗೆ ಮುಂದಾಗಿದ್ದುದು ವಿಶೇಷವಾಗಿತ್ತು. ಕೋರ್ಟ್ ಆವರಣದಿಂದ ಕಕ್ಕೆಹೊಳೆ ಜಂಕ್ಷನ್, ಮಡಿಕೇರಿ ರಸ್ತೆ, ದೇವಸ್ಥಾನ ರಸ್ತೆ, ಖಾಸಗಿ ಬಸ್ ನಿಲ್ದಾಣ, ಜೇಸೀ ವೇದಿಕೆ ಮೂಲಕ ತಹಶೀಲ್ದಾರ್ ಕಚೇರಿವರೆಗೆ ಜಾಥಾ ನಡೆಯಿತು. ವಿಶ್ವಮಾನವ ಕುವೆಂಪು ಶಾಲೆಯ ವಿದ್ಯಾರ್ಥಿಗಳು ಸಮವಸ್ತç ಧರಿಸಿ ಬ್ಯಾಂಡ್‌ಸೆಟ್‌ನೊAದಿಗೆ ಹೆಜ್ಜೆ ಹಾಕಿದರು.
ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಅಬಕಾರಿ ಇಲಾಖಾ ಸಿಬ್ಬಂದಿಗಳು, ಅರಣ್ಯಾಧಿಕಾರಿಗಳು, ಶಾಲಾ ಶಿಕ್ಷಕರು, ಸ್ವಸಹಾಯ ಸಂಘದ ಸದಸ್ಯೆಯರು, ಪಟ್ಟಣ ಪಂಚಾಯಿತಿ, ತಾಲೂಕು ಕಚೇರಿ ಸಿಬ್ಬಂದಿಗಳು, ಅಧಿಕಾರಿಗಳು ನ್ಯಾಯಾಧೀಶರುಗಳೊಂದಿಗೆ ಹೆಜ್ಜೆ ಹಾಕಿದರು.
ನಂತರ ತಾಲೂಕು ಕಚೇರಿ ಸಭಾಂಗಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ. ಗೋಕುಲ್ ಅವರು ಸರ್ಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರದ ವಿರುದ್ಧದ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಕಾಟ್ನಮನೆ ವಿಠಲ್ ಗೌಡ, ತಾಲೂಕು ತಹಶೀಲ್ದಾರ್ ಎಸ್.ಎನ್. ನರಗುಂದ್, ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಪ.ಪಂ. ಮುಖ್ಯಾಧಿಕಾರಿ ನಾಚಪ್ಪ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಿದ್ದರು.