ಕೂಡಿಗೆ, ನ. ೮: ಸಮುದಾಯ ದತ್ತ ಶಾಲಾ ಕಾರ್ಯಕ್ರಮ ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಮತ್ತು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಮೈಸೂರು ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಂಶುಪಾಲರು ಹಾಗೂ ನಿರ್ದೇಶಕರಾದ ಹೆಚ್.ಎನ್. ಗೀತಾಂಭ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಮೊದಲ ಸಮುದಾಯದತ್ತ ಶಾಲಾ ಕಾರ್ಯಕ್ರಮಕ್ಕೆ ಪಾಲ್ಗೊಂಡು ಶಾಲಾ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ ಪೋಷಕರ ಸಭೆಯಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿ-ಪೋಷಕರೊಂದಿಗೆ ಶೈಕ್ಷಣಿಕ ವಿಚಾರಗಳು ಹಾಗೂ ಶಾಲಾ ಅಭಿವೃದ್ಧಿ ಕುರಿತು ಸಮಾಲೋಚನೆ ನಡೆಸಿದ ಅವರು, ಶಾಲೆ ಎಂದರೆ ಕೇವಲ ಶಿಕ್ಷಕರು ಮತ್ತು ಮಕ್ಕಳಿಗಷ್ಟೇ ಸೀಮಿತವಲ್ಲ. ಶಾಲೆಗಳ ಪ್ರಗತಿಗೆ ಸಮುದಾಯದ ಸಕ್ರೀಯ ಪಾಲ್ಗೊಳ್ಳುವಿಕೆ ಅಗತ್ಯ ಎಂದರು.
ಶಾಲಾ ಮಕ್ಕಳ ಕಲಿಕೆಯಲ್ಲಿ ಪೋಷಕರ ಪಾತ್ರದ ಕುರಿತು ಮಾತನಾಡಿದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯ ಪ್ರಾಂಶುಪಾಲÀ ಎಂ. ಚಂದ್ರಕಾAತ್, ಶೈಕ್ಷಣಿಕ ಪ್ರಗತಿಯಲ್ಲಿ ಪಾಲಕರಿಗೂ ಮಹತ್ವದ ಹೊಣೆಗಾರಿಕೆ ಇದೆ ಎಂದರು.
ಶಾಲಾಭಿವೃದ್ಧಿಯಲ್ಲಿ ಸಮುದಾಯದ ಪಾತ್ರ ಕುರಿತು ಮಾತನಾಡಿದ ಮೈಸೂರು ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರವಾಚಕ ಮಲ್ಲೇಸ್ವಾಮಿ ಮಾತನಾಡಿ, ಎಲ್ಲಾ ಮಕ್ಕಳೂ ತಪ್ಪದೇ ಶಾಲೆಗೆ ಬರುವಂತಾಗಬೇಕು. ಮಕ್ಕಳ ಕಲಿಕಾ ಪ್ರಗತಿಗೆ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್, ಸಮುದಾಯದತ್ತ ಶಾಲಾ ಕಾರ್ಯಕ್ರಮದ ಮಹತ್ವ ಹಾಗೂ ಶಾಲಾ ಶೈಕ್ಷಣಿಕ ಪ್ರಗತಿ ಕುರಿತು ಮಾಹಿತಿ ನೀಡಿದರು.
ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಎ.ಎಂ. ಜವರಯ್ಯ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಉಷಾ, ಸದಸ್ಯರಾದ ಡಿ.ವೈ. ಶೃತಿ, ಎಂ. ನಾಗರಾಜ್, ರೇವಣ್ಣ, ಶಾಲಾ ಶಿಕ್ಷಕರಾದ ಕೆ. ಗೋಪಾಲಕೃಷ್ಣ, ಎಂ.ಟಿ. ದಯಾನಂದ ಪ್ರಕಾಶ್, ಪೋಷಕರು ಇದ್ದರು.