ಸೋಮವಾರಪೇಟೆ, ನ. ೨೧: ದೇಶದ ಭವಿಷ್ಯ ಯುವ ಜನಾಂಗದ ಮೇಲೆ ಅವಲಂಬಿತವಾಗಿದ್ದು, ಯುವ ಸಮುದಾಯದ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಅಭಿಪ್ರಾಯಿಸಿದರು.

ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಬೆಟ್ಟದಳ್ಳಿ ಸಿದ್ದಾರ್ಥ ನಗರದ ಮಾನವತಾ ಯುವಕ ಸಂಘದ ಸಂಯುಕ್ತ ಆಶ್ರಯದಲ್ಲಿ ಸಮೀಪದ ಶಾಂತಳ್ಳಿ ಹೋಬಳಿಯ ಕುಮಾರಲಿಂಗೇಶ್ವರ ಪ್ರೌಢಶಾಲಾ ಸಭಾಂಗಣದಲ್ಲಿ ಆಯೋಜಿತವಾಗಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಯುವಕ ಸಂಘಗಳು ಸಕ್ರಿಯವಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಬಲ ತುಂಬುವ ಕೆಲಸ ಮಾಡಲಾಗುವುದು.

ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟು ಕೊಳ್ಳಲು ಸಹಕಾರಿಯಾಗಿದ್ದು, ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಶಾಸಕರು ತಿಳಿಸಿದರು.

ಮುಖ್ಯ ಅತಿಥಿಯಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಮಾತನಾಡಿ, ಯುವ ಸಮುದಾಯ ದುಶ್ಚಟಗಳಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕಾರಣಕರ್ತ ರಾಗಬೇಕು.

ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಿಂದ ಹಲವು ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದ್ದು, ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನವತಾ ಯುವಕ ಸಂಘದ ಅಧ್ಯಕ್ಷ ಬಿ.ಸಿ. ಆದರ್ಶ್ ವಹಿಸಿದ್ದರು. ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೆಶಕಿ ವಿ.ಟಿ. ವಿಸ್ಮಯಿ, ತಾಲೂಕು ಯುವ ಒಕ್ಕೂಟ ಸ್ಥಾಪಕಾಧ್ಯಕ್ಷ ಉದಯ ಕುಮಾರ್, ಒಕ್ಕೂಟದ ಪದಾಧಿಕಾರಿಗಳಾದ ಹೆಚ್.ಕೆ. ಮಹೇಶ್, ರವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.