ಮಡಿಕೇರಿ, ಫೆ. ೧೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೊಡಗು ಜಿಲ್ಲೆ ಮಡಿಕೇರಿಯ ಆಶ್ರಯದಲ್ಲಿ ಕೊಡಗು ಜಿಲ್ಲೆಯ ಪಾನಮುಕ್ತ ನವಜೀವನ ಸಮಿತಿ ಸದಸ್ಯರ ತರಬೇತಿ ಕಾರ್ಯಾಗಾರವು ಮಡಿಕೇರಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟನೆ ಯನ್ನು ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಅವರು ನೆರವೇರಿಸಿದರು. ನಂತರ ಮಾತನಾಡಿದ ಅವರು, ಜೀವನ ದಲ್ಲಿ ಸೇವಾ ಮನೋಭಾವನೆ ಯನ್ನು ರೂಢಿಸಿಕೊಂಡರೆ ಜನ್ಮ ಸಾರ್ಥಕವಾಗಲು ಸಾಧ್ಯ, ಜೊತೆಗೆ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.

ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಅವರು ಮಾತನಾಡಿ, ಮಗುವನ್ನು ತಾಯಿಯು ಕೈಹಿಡಿದು ಪೋಷಿಸಿದಂತೆ ನವ ಜೀವನ ಸಮಿತಿ ಸದಸ್ಯರನ್ನು ತಾಯಿಯ ಹಾಗೆ ಪೋಷಕರು ಪೋಷಣೆ ಮಾಡಿದಾಗ ಜನಜಾಗೃತಿ ಕಾರ್ಯಕ್ರಮ ಯಶಸ್ವಿಯಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಗಳಾದ ಪುರುಷೋತ್ತಮ, ಮಡಿಕೇರಿ, ವೀರಾಜಪೇಟೆ ಹಾಗೂ ಸೋಮವಾರಪೇಟೆ ತಾಲೂಕುಗಳಿಂದ ಒಟ್ಟು ೩೦ ಜನ ಭಾಗವಹಿಸಿ ತರಬೇತಿಯನ್ನು ಪಡೆದುಕೊಂಡರು.

ತರಬೇತಿಯನ್ನು ಪಡೆದುಕೊಂಡವರಿಗೆ ಪ್ರಮಾಣ ಪತ್ರವನ್ನು ನೀಡಲಾಯಿತು. ಕಾರ್ಯಕ್ರಮದ ನಿರ್ವಹಣೆಯನ್ನು ಜನಜಾಗೃತಿ ಮೇಲ್ವಿಚಾರಕ ನಿತೇಶ್ ಕೆ. ಅವರು ನೆರವೇರಿಸಿ, ರೂಪೇಶ್ ಅವರು ವಂದಿಸಿದರು.