ಮಡಿಕೇರಿ, ಫೆ. ೨೦ : ಭಾರತೀಯ ಕ್ರೀಡಾ ಪ್ರಾಧಿಕಾರದ ಚಿನ್ನದ ಪದಕ ವಿಜೇತ ೧೯ ಹಾಕಿ ಕ್ರೀಡಾಪಟುಗಳಿಗೆ ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ಆತ್ಮೀಯವಾಗಿ ಗೌರವಿಸಲಾಯಿತು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಚಿನ್ನದ ಪದಕ ವಿಜೇತ ಕ್ರೀಡಾಪಟುಗಳಿಗೆ ಸನ್ಮಾನಿಸಿದರು.

ಇತ್ತೀಚೆಗೆ ಬೆಂಗಳೂರಿನ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ (ಸಾಯಿ) ನಡೆದ ಅಖಿಲ ಭಾರತ ಮಟ್ಟದ ಅಂತರ್ ಸಾಯಿ ಹಾಕಿ ಪಂದ್ಯಾವಳಿಯಲ್ಲಿ ಮಡಿಕೇರಿ ಕ್ರೀಡಾ ಪ್ರಾಧಿಕಾರದ ವಿದ್ಯಾರ್ಥಿನಿಯರು ಪಾಲ್ಗೊಂಡು ಚಿನ್ನದ ಪದಕ ಪಡೆದಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕೊಡಗು ಜಿಲ್ಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಇಲ್ಲಿನ ಕ್ರೀಡಾಪಟುಗಳು ರಾಷ್ಟç ಮತ್ತು ಅಂತರ ರಾಷ್ಟಿçÃಯ ಮಟ್ಟದಲ್ಲಿ ಹೆಸರು ಮಾಡುತ್ತಿರುವುದು ಕೊಡಗು ಜಿಲ್ಲೆಗೆ ಹೆಮ್ಮೆ ತರುತ್ತದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮಾತನಾಡಿ, ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಹಾಕಿ ಕ್ರೀಡೆಯಲ್ಲಿ ಮತ್ತಷ್ಟು ಸಾಧನೆ ಮಾಡುವಂತಾಗಬೇಕು ಎಂದು ಸಲಹೆಯಿತ್ತರು. ಭಾರತೀಯ ಕ್ರೀಡಾ ಪ್ರಾಧಿಕಾರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಮಿನಿ ಉನ್ನಿರಾಜ್, ಸಹಾಯಕ ಹಾಕಿ ತರಬೇತುದಾರರಾದ ಬಿ.ಎಂ. ಕೋಮಲ, ಇತರರು ಇದ್ದರು.