ಮಡಿಕೇರಿ. ಮಾ. ೨೮: ಹಸಿರುಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್ ರಾಂ ಅವರ ೧೧೭ನೇ ಜನ್ಮ ದಿನಾಚರಣೆ ಹಾಗೂ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೩ನೇ ಜನ್ಮ ದಿನಾಚರಣೆ ಯನ್ನು ನಗರದ ಗಾಂಧಿ ಭವನದಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆ ಯಲ್ಲಿ ನಡೆದ ಪೂರ್ವಭಾವಿ ಸಭೆ ಯಲ್ಲಿ ಈ ತೀರ್ಮಾನ ಕೈಗೊಳ್ಳ ಲಾಯಿತು. ಲೋಕಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಂ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲು ತೀರ್ಮಾನಿಸಲಾಯಿತು.

ಏಪ್ರಿಲ್ ೫ ರಂದು ಡಾ. ಬಾಬು ಜಗಜೀವನ್ ರಾಂ ಅವರ ೧೧೭ನೇ ಜನ್ಮ ದಿನಾಚರಣೆ ಮತ್ತು ಏಪ್ರಿಲ್ ೧೪ ರಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಆಯಾಯ ದಿನಗಳಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಗಾಂಧಿ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಹೆಚ್.ಎಲ್. ದಿವಾಕರ ಅವರು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಅಂಬೇಡ್ಕರ್ ಪ್ರತಿಮೆ ಇಲ್ಲ. ಆದ್ದರಿಂದ ನಗರದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಿಸುವಂತಾಗಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭ ಮಾತನಾಡಿದ ಪೌರಾಯುಕ್ತ ವಿಜಯ್, ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣ ಸಂಬAಧ ಜಾಗ ಅಂತಿಮಗೊಳಿಸಬೇಕಿದೆ ಎಂದು ಅವರು ಸಭೆಯ ಗಮನಕ್ಕೆ ತಂದರು.

ಈ ಸಂದರ್ಭ ಮಾತನಾಡಿದ ಪ್ರಮುಖರಾದ ಎಸ್.ಸಿ. ಸತೀಶ್, ನಗರದ ಹೊಸ ಖಾಸಗಿ ಬಸ್ ನಿಲ್ದಾಣ ಬಳಿಯ ಉದ್ಯಾನವನ ಅಥವಾ ನಗರದ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸಬಹುದಾಗಿದೆ ಎಂದು ಸಲಹೆ ಮಾಡಿದರು.

ಮತ್ತೊಬ್ಬ ಪ್ರಮುಖರಾದ ಮೋಹನ್ ಮೌರ್ಯ ಮಾತನಾಡಿ, ಪಕ್ಕದ ಜಿಲ್ಲೆಗಳಲ್ಲಿನ ಗ್ರಾಮಗಳಲ್ಲಿಯೂ ಸಹ ಅಂಬೇಡ್ಕರ್ ಪ್ರತಿಮೆ ಇದೆ. ಆದರೆ ಕೊಡಗು ಜಿಲ್ಲಾ ಕೇಂದ್ರದಲ್ಲಿಯೇ ಅಂಬೇಡ್ಕರ್ ಪ್ರತಿಮೆ ನಿರ್ಮಾಣವಾಗಿಲ್ಲ. ಆದ್ದರಿಂದ ಮಾದರಿ ನೀತಿ ಸಂಹಿತೆ ಮುಗಿದ ನಂತರ ಜಿಲ್ಲಾ ಕೇಂದ್ರದಲ್ಲಿ ಸೂಕ್ತ ಜಾಗ ಗುರುತಿಸಿ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕೋರಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಜೂನ್ ೪ ರ ನಂತರ ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸುವ ನಿಟ್ಟಿನಲ್ಲಿ ಜಾಗ ಅಂತಿಮಗೊಳಿಸುವAತೆ ಸಲಹೆ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಪ್ರಮುಖರಾದ ಪ್ರೇಮ್‌ಕುಮಾರ್, ಪ್ರೇಮ ಕೃಷ್ಣಪ್ಪ, ಜಯರಾಮ, ಸಿದ್ದೇಶ್ವರ, ಕುಮಾರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.