ಮಡಿಕೇರಿ, ಮಾ.೩೦: ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ೫ ನೇ ಸುತ್ತಿನಲ್ಲಿ ಏಪ್ರಿಲ್ ೧ ರಿಂದ ೩೦ ರವರೆಗೆ ಜಾನುವಾರುಗಳಿಗೆ ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಕಾರ್ಯಕ್ರಮ ನಡೆಯಲಿದೆ ಎಂದು ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ ತಿಳಿಸಿದ್ದಾರೆ.
ದನ, ಎಮ್ಮೆ, ಆಡು, ಕುರಿ, ಹಂದಿ, ಸೇರಿದಂತೆ ಎಲ್ಲಾ ಸೀಳು ಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಈ ರೋಗವು ರೈತರಿಗೆ ಆರ್ಥಿಕ ನಷ್ಟವನ್ನುಂಟು ಮಾಡುವ ರೋಗವಾಗಿದೆ.
ಕಾಲುಬಾಯಿ ಜ್ವರವು ಒಂದು ವೈರಾಣು ರೋಗವಾಗಿದ್ದು ನಿರ್ದಿಷ್ಟ ಚಿಕಿತ್ಸೆ ಅಸಾಧ್ಯವಾಗಿದೆ. ಕಾಲುಬಾಯಿ ರೋಗದಿಂದ ಗುಣಮುಖವಾದರೂ ಸಹ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ. ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಇಳಿಮುಖವಾಗಲಿದ್ದು, ಗರ್ಭಪಾತ, ಗರ್ಭಕಟ್ಟುವಲ್ಲಿ ವಿಳಂಬ, ಎತ್ತು - ಹೋರಿಗಳಲ್ಲಿ ಕೆಲಸ ಮಾಡುವ ಸಾಮರ್ಥ್ಯ ಕ್ಷೀಣಿಸಿ ತೀವ್ರ ಆರ್ಥಿಕ ನಷ್ಟವನ್ನುಂಟು ಮಾಡುತ್ತದೆ ಎಂದು ಮಾಹಿತಿ ನೀಡಿದರು.
ಲಸಿಕೆ ಹಾಕಿಸುವುದೊಂದೇ ಕಾಲುಬಾಯಿ ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿದೆ. ಈ ರೋಗದ ವಿರುದ್ಧ ಪ್ರತಿ ೬ ತಿಂಗಳಿಗೊಮ್ಮೆ ಲಸಿಕೆ ಹಾಕಿಸಿ, ರೋಗ ಬರದಂತೆ ತಡೆಗಟ್ಟಬಹುದಾಗಿದೆ.
ಕೊಡಗು ಜಿಲ್ಲೆಯಲ್ಲಿ ೨೦ ನೇ ಜಾನುವಾರು ಗಣತಿಯಂತೆ ದನ ಹಾಗೂ ಎಮ್ಮೆಗಳ ಸಂಖ್ಯೆ ೭೬,೯೨೦ ಇದ್ದು, ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈಗಾಗಲೇ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ಪೂರ್ವ ಸಿದ್ದತೆಯನ್ನು ಮಾಡಿಕೊಳ್ಳಲಾಗಿದ್ದು, ೭೦ ಲಸಿಕಾ ದಾರರನ್ನು ಒಳಗೊಂಡ ಒಟ್ಟು ೧೧ ತಂಡಗಳನ್ನು ರಚಿಸಲಾಗಿದೆ. ಲಸಿಕಾದಾರರು ರೈತರ/ ಜಾನುವಾರು ಮಾಲೀಕರ ಮನೆ ಮನೆಗೆ ತೆರಳಿ ಲಸಿಕೆ ನೀಡಲಿದ್ದಾರೆ ಎಂದು ವಿವರಿಸಿದರು.
ಲಸಿಕೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ರೀತಿಯ ಶುಲ್ಕ ಇರುವುದಿಲ್ಲ. ಲಸಿಕಾದಾರರು ಜಾನುವಾರು ಮಾಲೀಕರ ಮನೆಗಳಿಗೆ ಬಂದಾಗ ಸಹಕಾರ ನೀಡಿ ೪ ತಿಂಗಳ ಮೇಲ್ಪಟ್ಟ ಎಲ್ಲಾ ದನ, ಎಮ್ಮೆಗಳಿಗೆ ಲಸಿಕೆ ಹಾಕಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಮಡಿಕೇರಿ ದೂ.ಸಂ. ೯೪೪೮೬೪೭೨೭೬, ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಸೋಮವಾರಪೇಟೆ ದೂ.ಸಂ.೯೪೪೮೫೯೭೪೯೬, ಸಹಾಯಕ ನಿರ್ದೇಶಕರು, ಪಶುಆಸ್ಪತ್ರೆ, ವಿರಾಜಪೇಟೆ ದೂ.ಸಂ. ೯೧೪೧೦೯೩೯೯೬, ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ, ಕುಶಾಲನಗರ ೯೪೪೮೪೨೨೨೬೯ ಹಾಗೂ ಸಹಾಯಕ ನಿರ್ದೇಶಕರು, ಪಶುಆಸ್ಪತ್ರೆ, ಪೊನ್ನಂಪೇಟೆ ದೂ.ಸಂ.೯೪೪೯೦೮೧೩೪೩ ನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.