ಮಡಿಕೇರಿ, ಮೇ ೧೪: ಕೊಡಗು ಜಿಲ್ಲಾ, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ತಾ. ೨೧ ರಂದು ೨೧ನೇ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಕವಯತ್ರಿ ಕೆ.ಜಿ. ರಮ್ಯ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಕಾಲೇಜಿನ ಪ್ರಾಚಾರ್ಯ ಪ್ರೊ. ಬಿ.ಎಂ. ಪ್ರವೀಣ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕ.ಸಾ.ಪ. ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಸಾಹಿತ ಮಾರುತಿ ದಾಸಣ್ಣನವರ ಪ್ರಶಸ್ತಿ ಪ್ರದಾನ ಮಾಡಲಿದ್ದು, ಸಾಹಿತಿ ಸುನಿತಾ ಲೋಕೇಶ್ ಮುಖ್ಯ ಭಾಷಣ ಮಾಡಲಿದ್ದಾರೆ. ಕಥಾ ಸ್ಪರ್ಧೆಯ ವಿಜೇತರಿಗೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಸುನಿಲ್ ಕುಮಾರ್ ಬಹುಮಾನ ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಬಿ.ಸಿ. ದೊಡ್ಡೇಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎನ್. ಮಂಜುನಾಥ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.