ಸಿದ್ದಾಪುರ, ಮೇ ೨೨: ಇತ್ತೀಚೆಗೆ ಸುರಿಯುತ್ತಿರುವ ಮಳೆಯಿಂದಾಗಿ ವೀರಾಜಪೇಟೆ ತಾಲೂಕಿನಲ್ಲಿ ಮೂರು ಮನೆಗಳಿಗೆ ಹಾನಿ ಆಗಿದ್ದು, ಈ ಬಗ್ಗೆ ಕಂದಾಯ ಇಲಾಖಾಧಿಕಾರಿಗಳು ವರದಿ ನೀಡಿದ್ದಾರೆಂದು ವೀರಾಜಪೇಟೆ ತಹಶೀಲ್ದಾರ್ ಹೆಚ್.ಎನ್. ರಾಮಚಂದ್ರ ‘ಶಕ್ತಿ’ಗೆ ಮಾಹಿತಿ ನೀಡಿದ್ದಾರೆ.

ಮಳೆಯಿಂದ ಯಾವುದೇ ದೊಡ್ಡ ಹಾನಿಗಳು ಸಂಭವಿಸಿಲ್ಲ ಎಂದ ಅವರು ಮಳೆ ಸುರಿದ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ಬಗೆಹರಿದಿದೆ ಎಂದರು. ಮಳೆಗಾಲ ಆರಂಭಕ್ಕೂ ಮುನ್ನ ವೀರಾಜಪೇಟೆ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳಲು ಈಗಾಗಲೇ ಜಿಲ್ಲಾಧಿಕಾರಿ ಸೂಚನೆ ನೀಡಿರುತ್ತಾರೆ. ಈ ಹಿನ್ನೆಲೆಯಲ್ಲಿ ತಾಲೂಕಿನ ವ್ಯಾಪ್ತಿಯ ಎಲ್ಲಾ ಗ್ರಾಮ ಆಡಳಿತಾಧಿಕಾರಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮತ್ತು ಇನ್ನಿತರ ಇಲಾಖಾಧಿಕಾರಿಗಳ ಸಭೆ ನಡೆಸಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಮಳೆಗಾಲದ ಸಂದರ್ಭದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ನಿವಾಸಿಗಳಿಗೆ ಹಾಗೂ ಅಪಾಯದಲ್ಲಿರುವ ವಾಸಿಗಳಿಗೆ ತುರ್ತು ಸಂದರ್ಭದಲ್ಲಿ ಆಶ್ರಯವನ್ನು ಪಡೆಯಲು ಶಾಲಾ ಕಟ್ಟಡಗಳು ಇನ್ನಿತರ ಸಭಾಂಗಣಗಳನ್ನು ಗುರುತಿಸಲಾಗಿದೆಂದು ತಹಶೀಲ್ದಾರ್ ಮಾಹಿತಿ ನೀಡಿದರು. ಮಳೆಗಾಲದ ಸಂದರ್ಭದಲ್ಲಿ ತಾಲೂಕಿನ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶಗಳನ್ನು ಕಂದಾಯ ಇಲಾಖೆ ಗುರುತಿಸಿದ್ದು, ಅಪಾಯಕಾರಿ ಸ್ಥಳಗಳಲ್ಲಿ ವಾಸ ಮಾಡಿಕೊಂಡಿರುವ ಕುಟುಂಬಗಳಿಗೆ ತುರ್ತು ಸಂದರ್ಭದಲ್ಲಿ ಸ್ಥಳಾಂತರ ಮಾಡಲು ಆಯಾ ಸಂದರ್ಭದಲ್ಲಿ ಕ್ರಮ ಕೈಗೊಳ್ಳಲು ಕಂದಾಯ ಇಲಾಖಾಧಿಕಾರಿಗಳು ಹಾಗೂ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಮಳೆಗಾಲಕ್ಕೆ ಬೇಕಾದ ಸಿದ್ಧತೆಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು. ವರದಿ: ವಾಸು