ನಾಪೋಕ್ಲು, ಮೇ ೨೪: ಬೇಸಿಗೆ ಶಿಬಿರಗಳ ಆಯೋಜನೆಯಿಂದ ಮಕ್ಕಳ ಮನಸ್ಸನ್ನು ಬದಲಾಯಿಸ ಬಹುದು ಎಂದು ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡAಡ ಸಿ. ನಾಣಯ್ಯ ಹೇಳಿದರು.

ಪೇರೂರಿಯನ್ಸ್ ಕ್ಲಬ್ ವತಿಯಿಂದ ಸಮೀಪದ ಪೇರೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಬೇಸಿಗೆ ಶಿಬಿರದ ಸಮರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಪರೀಕ್ಷೆಗಳು ಕಳೆದ ನಂತರ ಮಕ್ಕಳು ಸಮಯವನ್ನು ವ್ಯರ್ಥ ಮಾಡುವ ಬದಲು ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ಹವ್ಯಾಸಗಳನ್ನು ವೃದ್ಧಿಸಿಕೊಳ್ಳಬಹುದು ಎಂದರು. ಪುಟ್ಟ ಮಕ್ಕಳ ಭವಿಷ್ಯವನ್ನು ರೂಪಿಸಲು ಶಿಬಿರಗಳು ಅಗತ್ಯ. ಸ್ವತಂತ್ರವಾಗಿ ಬದುಕುವ ವ್ಯವಸ್ಥೆಯನ್ನು ಇಂತಹ ಶಿಬಿರದಲ್ಲಿ ಕಲಿಸಿ ಕೊಡಲಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಆಶಯದೊಂದಿಗೆ ಮಕ್ಕಳ ಭವಿಷ್ಯ ನಿರ್ಮಿಸುವ ಕಾರ್ಯಕ್ಕೆ ಮುಂದಾಗಿರುವ ಪೇರೂರಿಯನ್ ಕ್ಲಬ್ ಸದಸ್ಯರ ಕಾರ್ಯ ಶ್ಲಾಘನೀಯ ಎಂದರು.

ಅತಿಥಿಗಳಾಗಿ ಭಾಗವಹಿಸಿದ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ರವಿಕುಮಾರ್ ಉದ್ಯಮಿ ಬೆಂಗಳೂರು ಮಾತನಾಡಿ, ಶಿಬಿರದ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಹಾಕಿ ಶಿಬಿರದ ಸಂಚಾಲಕ ತಾಪಂಡ ಅಪ್ಪಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಬಲ್ಲಮಾವಟಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಮಣವಟ್ಟಿರ ಹರೀಶ್ ಕುಶಾಲಪ್ಪ, ಬಲ್ಲಮಾವಟಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚೋಕಿರ ಬಾಬಿ ಭೀಮಯ್ಯ, ನೆಲಜಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿಜು ಅಪ್ಪಚ್ಚ, ಬಲ್ಲಮಾವಟಿ ಗ್ರಾಮ ಪಂಚಾಯಿತಿ ಸದಸ್ಯ ಮಚ್ಚುರ ರವೀಂದ್ರ, ಮಾಜಿ ಮಂಡಲ ಪ್ರಧಾನ ಮೂವೆರ ನಾನಪ್ಪ, ಶಿಬಿರದ ಮುಖ್ಯ ತರಬೇತಿದಾರರಾದ ಅಪ್ಪಚೆಟ್ಟೋಳಂಡ ಹರ್ಷಿತ್ ಅಯ್ಯಪ್ಪ, ಮುಕ್ಕಾಟಿರ ಶಿಶಿರ್ ಮುತ್ತಪ್ಪ, ಶಿಬಿರಾರ್ಥಿಗಳು, ಪೋಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಈ ಸಂದರ್ಭ ಶಿಬಿರಾರ್ಥಿಗಳಿಗೆ ವೇದಿಕೆಯಲ್ಲಿದ್ದ ಗಣ್ಯರು ಅರ್ಹತಾ ಪತ್ರ ವಿತರಿಸಿ ಶುಭ ಹಾರೈಸಿದರು.