ಮಡಿಕೇರಿ, ಮೇ ೨೭: ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಆದ್ಯತೆ ನೀಡುವ ಉದ್ದೇಶದೊಂದಿಗೆ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಟಿ. ಭಾಸ್ಕರ ಶೆಟ್ಟಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೭ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಕ್ಕೆ ತರುವುದು, ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ವೇತನ ಭದ್ರತೆ ಹಾಗೂ ಸೇವಾ ಭದ್ರತೆ ಒದಗಿಸುವುದು. ಉನ್ನತ ಶಿಕ್ಷಣ, ಪದವಿ ಕಾಲೇಜಿನ ಅರ್ಹತೆ, ಸೇವಾ ಹಿರಿತನದ ಆಧಾರದಲ್ಲಿ ಮುಂಬಡ್ತಿ ಹಾಗೂ ಪ್ರಾಂಶುಪಾಲರ ಹುದ್ದೆಗೆ ಅವಕಾಶ ಕಲ್ಪಿಸುವುದು. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದು ಸೇರಿದಂತೆ ಶಿಕ್ಷಕರ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶವನ್ನು ಹೊಂದಿದ್ದೇನೆ ಎಂದು ಭಾಸ್ಕರ ಶೆಟ್ಟಿ ಹೇಳಿದರು. ಶಿಕ್ಷಣ ಕ್ಷೇತ್ರದ ಅಭ್ಯರ್ಥಿಗಳಾಗಿ ಶಿಕ್ಷಣ ಕ್ಷೇತ್ರದವರೇ ಆಯ್ಕೆ ಆಗಬೇಕೆಂದು ಅಭಿಪ್ರಾಯಪಟ್ಟ ಅವರು ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕನಾಗಿರುವ ತಾನು ಶಿಕ್ಷಣ ಕ್ಷೇತ್ರ ಮಲಿನವಾಗದಂತೆ ತಡೆಯುವ ಗುರಿಯನ್ನು ಹೊಂದಿದ್ದೇನೆ ಎಂದು ನುಡಿದರು.

ಗೋಷ್ಠಿಯಲ್ಲಿ ಖ್ಯಾತ ಕಣ್ಣಿನ ತಜ್ಞ ಪ್ರೊ. ಸುಬ್ಬಣ್ಣ ಶೆಟ್ಟಿ ಉಪಸ್ಥಿತರಿದ್ದರು.