ಮಡಿಕೇರಿ ಮೇ ೩೧: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅಧ್ಯಕ್ಷತೆಯಲ್ಲಿ ನಡೆಯಿತು.

ಪರಿಷತ್ತಿನ ಮುಂದಿನ ಕಾರ್ಯಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಚುನಾವಣೆ ಮತ್ತು ಶಾಲೆಗಳಿಗೆ ರಜೆ ಇದ್ದ ಕಾರಣ ಉಳಿದು ಹೋಗಿರುವ ದತ್ತಿ ಕಾರ್ಯಕ್ರಮವನ್ನು ಮುಂದಿನ ತಿಂಗಳು ೧೫ ರ ಒಳಗಾಗಿ ಮಾಡಬೇಕು. ೨೦೨೪-೨೫ರ ನೂತನ ದತ್ತಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕಿದೆ. ಎಲ್ಲ್ಲಾ ಜಿಲ್ಲಾ ತಾಲೂಕು ಮತ್ತು ಹೋಬಳಿ ಸಮಿತಿಗಳು ಜವಾಬ್ದಾರಿ ತೆಗೆದುಕೊಂಡು ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗಬೇಕು ಎಂದು ಜಿಲ್ಲಾಧ್ಯಕ್ಷ ಕೇಶವ ಕಾಮತ್ ಮನವಿ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ವತಿಯಿಂದ ರಾಜ್ಯದಲ್ಲಿರುವ ಎಲ್ಲಾ ಜಿಲ್ಲೆ, ತಾಲೂಕು ಮತ್ತು ಹೋಬಳಿ ಘಟಕಗಳ ಕಾರ್ಯಕಾರಿ ಸಮಿತಿಯ ಸದಸ್ಯರುಗಳ ಭಾವಚಿತ್ರ ಮತ್ತು ಮಾಹಿತಿ ಇರುವ ಪುಸ್ತಕವನ್ನು ಬಿಡುಗಡೆ ಮಾಡುವ ಯೋಜನೆ ಇದ್ದು ಕೂಡಲೇ ಅದಕ್ಕೆ ಬೇಕಾದ ಭಾವಚಿತ್ರ, ಅರ್ಜಿ ನೀಡಬೇಕೆಂದು ಕೋರಿದರು.

ಮೃತಪಟ್ಟಿರುವ ಸಾಹಿತ್ಯ ಪರಿಷತ್ತಿನ ಸದಸ್ಯರ ಪಟ್ಟಿ ತಯಾರಿಸಿ ಈಗಾಗಲೇ ಎಲ್ಲಾ ತಾಲೂಕು ಸಮಿತಿಗಳಿಗೆ ಕಳುಹಿಸಲಾಗಿದೆ. ಅದನ್ನು ಪರಿಶೀಲಿಸಿ ದೃಢಪಡಿಸಿ ಕೇಂದ್ರಕ್ಕೆ ಕಳುಹಿಸಬೇಕಾಗಿದೆ. ಮುಂದಿನ ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ಮೃತ ಸದಸ್ಯರ ಹೆಸರನ್ನು ತೆಗೆದು ಹಾಕುವ ಕೆಲಸ ನಡೆಯಬೇಕಾಗಿದೆ ಎಂದರು. ಇದೇ ಸಂದರ್ಭ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಹಂಚೇಟ್ಟಿರ ಫ್ಯಾನ್ಸಿ ಮುತ್ತಣ್ಣ ತಮ್ಮ ಅತ್ತೆ ಮಾವ ಅವರ ಹೆಸರಿನಲ್ಲಿ ಐವತ್ತು ಸಾವಿರ ರೂಪಾಯಿಗಳ ದತ್ತಿ ಸ್ಥಾಪನೆ ಮಾಡುವುದಾಗಿ ಘೋಷಿಸಿದರು. ಸಭೆಯಲ್ಲಿ ಜಿಲ್ಲಾ ಗೌರವ ಕಾರ್ಯದರ್ಶಿ ಎಸ್.ಐ. ಮುನಿರ್ ಅಹಮದ್, ರೇವತಿ ರಮೇಶ್, ಜಿಲ್ಲಾ ಗೌರವ ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಆರ್.ಪಿ. ಚಂದ್ರಶೇಖರ್, ಮಡಿಕೇರಿ ತಾಲೂಕು ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಸಂಪಾಜೆ ಹೋಬಳಿ ಅಧ್ಯಕ್ಷ ಗೋಪಾಲ್ ಪೆರಾಜೆ, ಮೂರ್ನಾಡು ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್, ಕೋಶಾಧಿಕಾರಿ ಕೆ.ಡಿ. ವಿಂದ್ಯ, ಹೆಬ್ಬಾಲೆ ಘಟಕದ ಅಧ್ಯಕ್ಷ ಎಂ. ಎನ್. ಮೂರ್ತಿ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಫ್ಯಾನ್ಸಿ ಮುತ್ತಣ್ಣ, ಮ.ನಾ ವೆಂಕಟನಾಯಕ್, ಸಹನ ಕಾಂತಬೈಲು, ಗೌರಮ್ಮ ಮಾದಮಯ್ಯ, ಚೊಕ್ಕಾಡಿ ಪ್ರೇಮ ರಾಘವಯ್ಯ, ಹೆಚ್.ಪಿ. ಜಯಮ್ಮ, ಹೆಚ್.ಎಸ್. ಪ್ರೇಮ್ ಕುಮಾರ್, ಕುಶಾಲನಗರ ತಾಲೂಕು ಕೋಶಾಧಿಕಾರಿ ಕೆ.ವಿ. ಉಮೇಶ್, ಮಡಿಕೇರಿ ತಾಲೂಕು ಕೋಶಾಧಿಕಾರಿ ಸಿದ್ದರಾಜು ಬೆಳ್ಳಯ್ಯ, ಮಡಿಕೇರಿ ತಾಲೂಕು ನಿಕಟಪೂರ್ವ ಅಧ್ಯಕ್ಷ ಅಂಬೆಕಲ್ ನವೀನ್ ಮತ್ತು ಕಚೇರಿ ಸಿಬ್ಬಂದಿ ರೇಣುಕಾ ಪಾಲ್ಗೊಂಡಿದ್ದರು.