ಮಡಿಕೇರಿ, ಜೂ. ೧: ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ. ನಾಗೇಂದ್ರ ವಿರುದ್ಧ ಆರೋಪವಿರುವ ಹಿನ್ನೆಲೆ ಅವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಿ ಬಂಧಿಸಿ ವಿಚಾರಣೆಗೊಳಪಡಿಸುವಂತೆ ಜಿಲ್ಲಾ ಬಿಜೆಪಿ ಹಾಗೂ ಯುವಮೋರ್ಚಾ ಒತ್ತಾಯಿಸಿತು.

ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ, ಮಾನವ ಸರಪಳಿ ರಚಿಸಿ, ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾನಿರತರು ಸಚಿವ ನಾಗೇಂದ್ರ ಬಂಧನಕ್ಕೆ ಆಗ್ರಹಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ನಿಗಮದ ಅಧೀಕ್ಷಕ ಡೆತ್‌ನೋಟ್ ಬರೆದಿಟ್ಟು ಅವ್ಯವಹಾರದ ಬಗ್ಗೆ ತಿಳಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಸರಕಾರದ ಆಡಳಿತ ವಿಫಲತೆ ಸಾಧಿಸುತ್ತಿದೆ. ದಿನನಿತ್ಯ ಕೊಲೆಗಳು, ಸಮಾಜಘಾತುಕ ಕೃತ್ಯಗಳು, ಹಗರಣಗಳು ನಡೆಯುತ್ತಿವೆ. ಆದರೆ, ರಾಜ್ಯ ಸರಕಾರ ಯಾವುದೇ ಕ್ರಮವಹಿಸದೆ ಮೌನತಾಳಿರುವುದು ಖಂಡನೀಯ ಎಂದ ಅವರು, ಬಡವರ ಬಂಧು ಸರಕಾರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪರಿಶಿಷ್ಟ ಜಾತಿ, ಪಂಗಡಕ್ಕೆ ಮೀಸಲಿಟ್ಟ ಅನುದಾನವನ್ನು ಬಿಟ್ಟಿ ಭಾಗ್ಯಕ್ಕೆ ವ್ಯಯಮಾಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ನಿಗಮದಲ್ಲಿ ಅವ್ಯವಹಾರದ ಬಗ್ಗೆ ಡೆತ್‌ನೋಟ್‌ನಲ್ಲಿ ಉಲ್ಲೇಖವಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಸಚಿವ ನಾಗೇಂದ್ರ ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕೆಂದು ಆಗ್ರಹಿಸಿದರು.

(ಮೊದಲ ಪುಟದಿಂದ) ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಮಾತನಾಡಿ, ಸಚಿವ ನಾಗೇಂದ್ರ ವಿರುದ್ಧ ಇದುವರೆಗೂ ಎಫ್‌ಐಆರ್ ಆಗದಿರುವುದು ಖಂಡನೀಯ. ರೂ. ೧೮೭ ಕೋಟಿ ಸರಕಾರದ ಖಾತೆಯಿಂದ ವರ್ಗಾವಣೆಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ಎಸ್.ಸಿ. ಮೋರ್ಚಾದ ಅಧ್ಯಕ್ಷ ಪಿ.ಎಂ. ರವಿ ಮಾತನಾಡಿ, ಪರಿಶಿಷ್ಟ ವರ್ಗದ ಅನುದಾನ ದುರ್ಬಳಕೆ ಹೆಚ್ಚಾಗುತ್ತಿದ್ದು, ಎಲ್ಲಾ ನಿಗಮ ಗಳಲ್ಲಿಯೂ ತನಿಖೆ ಯಾಗಬೇಕಾಗಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ವಿ.ಕೆ. ಲೋಕೇಶ್, ಉಪಾಧ್ಯಕ್ಷ ಮನುಮಂಜುನಾಥ್, ಅರುಣ್ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ನಗರ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್, ಯುವಮೋರ್ಚಾ ನಗರಾಧ್ಯಕ್ಷ ಪೂಣಚ್ಚ, ಪ್ರಧಾನ ಕಾರ್ಯದರ್ಶಿ ವಿಘ್ನೇಶ್, ನಗರಸಭಾ ಸದಸ್ಯರುಗಳಾದ ಸವಿತಾ ರಾಕೇಶ್, ಕೆ.ಎಸ್. ರಮೇಶ್, ಕೆ.ಎಸ್. ರಮೇಶ್, ಎಸ್.ಸಿ. ಸತೀಶ್, ಚಿತ್ರಾವತಿ, ಸಬಿತ ಸೇರಿದಂತೆ ಇನ್ನಿತರರು ಹಾಜರಿದ್ದರು.