ಸಿದ್ದಾಪುರ, ಜೂ. ೭: ನೆಲ್ಯಹುದಿಕೇರಿ ಗ್ರಾಮದ ಪ್ರವಾಹ ಪೀಡಿತ ಪ್ರದೇಶಗಳಿಗೆ ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ಹಾಗೂ ಕಂದಾಯ ಪರಿವೀಕ್ಷಕ ಸಂತೋಷ್ ಭೇಟಿ ನೀಡಿ ಪರಿಶೀಲಿಸಿ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.

೨೦೧೮ ಹಾಗೂ ೨೦೧೯ರಲ್ಲಿನ ಮಹಾಮಳೆಗೆ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬಾರಗುAಡಿ ಹಾಗೂ ಬೆಟ್ಟದ ಭಾಗದ ನದಿ ತೀರದ ನೂರಾರು ಮನೆಗಳು ಪ್ರವಾಹಕ್ಕೆ ಸಿಲುಕಿ ನೆಲಸಮಗೊಂಡಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಪ್ರವಾಹ ಪೀಡಿತ ಪ್ರದೇಶಗಳಿಗೆ ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ಹಾಗೂ ಕಂದಾಯ ಪರಿವೀಕ್ಷಕ ಸಂತೋಷ್ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೆ ಗ್ರಾಮ ಪಂಚಾಯಿತಿಯ ಆಡಳಿತ ಮಂಡಳಿಯ ಸದಸ್ಯರೊಂದಿಗೆ ಚರ್ಚಿಸಿದರು. ಮುಂಜಾಗ್ರತಾ ಕ್ರಮದ ಬಗ್ಗೆ ಪಂಚಾಯಿತಿಯವರಿಗೆ ಅಗತ್ಯ ಕ್ರಮದ ಬಗ್ಗೆ ಮಾಹಿತಿ ನೀಡಿದರು. ಪ್ರವಾಹ ಸಂದರ್ಭದಲ್ಲಿ ನದಿ ತೀರದವರು ತಾತ್ಕಾಲಿಕವಾಗಿ ಆಶ್ರಯ ಪಡೆಯಲು ಗುರುತಿಸಿರುವ ಪರಿಹಾರ ಕೇಂದ್ರಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲ ಆರಂಭವಾಗಿದ್ದು, ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗುವ ಮುಂಚಿತವಾಗಿ ನದಿ ತೀರದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳಿ ಆಶ್ರಯ ಪಡೆಯುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ವತಿಯಿಂದ ನದಿ ತೀರದ ನಿವಾಸಿಗಳಿಗೆ ನೋಟೀಸ್ ಜಾರಿ ಮಾಡಲು ಇಲಾಖೆ ಸಿದ್ಧತೆ ಕೈಗೊಂಡಿದೆ. ಮಳೆಗಾಲದಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಕಂದಾಯ ಇಲಾಖೆಯ ಮೂಲಕ ಕೈಗೊಳ್ಳಲು ಎಲ್ಲಾ ಸಿದ್ಧತೆಯನ್ನು ಕೈಗೊಂಡಿರುವುದಾಗಿ ತಹಶೀಲ್ದಾರ್ ಕಿರಣ್ ಗೌರಯ್ಯ ತಿಳಿಸಿದ್ದಾರೆ. ಈ ಸಂದರ್ಭ ಗ್ರಾಮ ಆಡಳಿತಾಧಿಕಾರಿ ಸಚಿನ್, ಸಿಬ್ಬಂದಿಗಳು ಇದ್ದರು.-ವಾಸು