ಮಡಿಕೇರಿ, ಜೂ. ೯: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ ಸಹಯೋಗದೊಂದಿಗೆ ನಗರದ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಶಾಲಾ ಶಿಕ್ಷಣದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆಯು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಾಯವಾಗುವುದು ಎಂದರು.
ಜಿಲ್ಲೆಯ ವಿವಿಧೆಡೆಯಿಂದ ೧೦೦ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳಿಗಾಗಿ ಕೊಡಗು ಜಿಲ್ಲೆಯ ಪಾರಂಪರಿಕ ಸಂಸ್ಕೃತಿ ಕುರಿತು ನೃತ್ಯ ಪ್ರದರ್ಶನ ಕಾರ್ಯಕ್ರಮ ಅಯೋಜಿಸಲಾಗಿತ್ತು. ನಂತರ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಮಂಜುಳಾ ಮಾತನಾಡಿ, ಮಕ್ಕಳಿಗೆ ಬದುಕುವ ಹಕ್ಕು ಮತ್ತು ಉತ್ತಮ ಮಟ್ಟದ ಆರೋಗ್ಯ, ಬಾಲ್ಯದಲ್ಲಿ ಆರೈಕೆ ಮತ್ತು ಅಭಿವೃದ್ಧಿ, ಬಿಡುವು, ಮನರಂಜನೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಪ್ರಮುಖವಾದ ಅಂಶಗಳಾಗಿದ್ದು, ಇವುಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿರುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀಕ್ಷಕಿ ವಿಮಲ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸವಿತಾ ಹಾಗೂ ಸಿಬ್ಬಂದಿಗಳಾದ ಜಯಂತಿ, ಹರೀಶ್ ಕೆ.ಎನ್, ಕಾವ್ಯ ಪಿ.ಎನ್, ನಿತಿನ್ ಪಿ.ಬಿ, ಕೇಶಿನಿ, ಶೈಲಜಾ, ಕೃಷ್ಣಪ್ಪ ಬಿ ಹಾಗೂ ಇನ್ನಿತರರು ಹಾಜರಿದ್ದರು.