ಸೋಮವಾರಪೇಟೆ, ಜೂ. ೯: ಜಿಲ್ಲೆಯ ಬಡ ಕೂಲಿ ಕಾರ್ಮಿಕರಿಗೆ ಶೀಘ್ರ ನಿವೇಶನ ನೀಡಬೇಕು ಹಾಗೂ ವನ್ಯಜೀವಿ ದಾಳಿ ತಡೆಗೆ ಅರಣ್ಯ ಇಲಾಖೆ ಶಾಶ್ವತ ಯೋಜನೆ ರೂಪಿಸಬೇಕೆಂದು ಆಗ್ರಹಿಸಿ ಯುನೈಟೆಡ್ ಪ್ಲಾಂಟೇಷನ್ ವಕರ್ಸ್ ಯೂನಿಯನ್ ವತಿಯಿಂದ ಜೂನ್ ೧೩ ರ ಗುರುವಾರದಂದು ಸೋಮವಾರಪೇಟೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಯೂನಿಯನ್ನ ಜಿಲ್ಲಾಧ್ಯಕ್ಷ ಹೆಚ್.ಎಂ. ಸೋಮಪ್ಪ ಇಲ್ಲಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ತಾ.೧೩ರಂದು ಬೆಳಿಗ್ಗೆ ೧೦ ಗಂಟೆಗೆ ಪಟ್ಟಣದ ಕಕ್ಕೆಹೊಳೆ ಜಂಕ್ಷನ್ ಬಳಿಯಿಂದ ಮುಖ್ಯ ಬೀದಿಗಳಲ್ಲಿ ಮೆರವಣಿಗೆಯಲ್ಲಿ ತೆರಳಿ ಜೇಸಿ ವೇದಿಕೆಯಲ್ಲಿ ಪ್ರತಿಭಟನೆ ಮತ್ತು ಧರಣಿ ನಡೆಸಲಾಗುವುದು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಅಹವಾಲನ್ನು ಸ್ವೀಕರಿಸಬೇಕೆಂದು ಒತ್ತಾಯಿಸಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಲೈನ್ಮನೆ ಮತ್ತು ಬಾಡಿಗೆ ಮನೆಯಲ್ಲಿ ಸಂಕಷ್ಟದ ಜೀವನ ನಡೆಸುತ್ತಿರುವ ಬಡ ಕೂಲಿ ಕಾರ್ಮಿಕ ವರ್ಗಕ್ಕೆ ಸರಕಾರ ಶೀಘ್ರ ನಿವೇಶನ ಅಥವಾ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯಲ್ಲಿ ಕಾಡಾನೆ ಹಾಗೂ ಹುಲಿ ಹಾವಳಿ ಹೆಚ್ಚುತ್ತಿದ್ದು, ಅಮಾಯಕ ಜೀವಗಳು ಬಲಿಯಾಗುತ್ತಿದ್ದರೂ ಸಮಸ್ಯೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಅರಣ್ಯ ಇಲಾಖೆ ಪರಿಹಾರದ ಚೆಕ್ ನೀಡಿ ಕೈ ತೊಳೆದುಕೊಳ್ಳುತ್ತಿದೆಯೇ ಹೊರತು ಶಾಶ್ವತ ಪರಿಹಾರದ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲಾ ಬಡ ಕಾರ್ಮಿಕರು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ತಾಲೂಕು ಸಂಚಾಲಕರುಗಳಾದ ಸುಂದರ ಹಾಗೂ ಶೇಷಪ್ಪ, ಕಾರ್ಯದರ್ಶಿ ಕೆ.ಎಂ. ಮಂಜುನಾಥ್ ಮತ್ತು ಸಿಪಿಐ ತಾಲೂಕು ಕಾರ್ಯದರ್ಶಿ ಶಬಾನಾ ಇದ್ದರು.