ಕೂಡಿಗೆ, ಜೂ. ೧೫: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತನಿಧಿ ಕೇಂದ್ರ, ಜಿಲ್ಲಾಸ್ಪತ್ರೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸೋಮವಾರಪೇಟೆ ತಾಲೂಕು, ಕೊಡಗು ವಿಶ್ವ ವಿದ್ಯಾಲಯ, ಭಾರತೀಯ ರೆಡ್‌ಕ್ರಾಸ್ ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ ಜ್ಞಾನ ಕಾವೇರಿ ಕ್ಯಾಂಪಸ್, ಕೊಡಗು ವಿಶ್ವವಿದ್ಯಾಲಯ ಚಿಕ್ಕ ಅಳುವಾರದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ನಡೆಯಿತು.

ಚಿಕ್ಕಅಳುವಾರ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ.ಅಶೋಕ ಸಂಗಪ್ಪ ಆಲೂರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮುಂಬರುವ ದಿನಗಳಲ್ಲಿ ಕೊಡಗು ವಿಶ್ವ ವಿದ್ಯಾಲಯಕ್ಕೆ ಒಳಪಟ್ಟ ಎಲ್ಲಾ ಕಾಲೇಜುಗಳಲ್ಲಿ ರಕ್ತದಾನ ಶಿಬಿರಗಳನ್ನು ಏರ್ಪಡಿಸಲು ಕ್ರಮವಹಿಸಲಾಗುವುದು ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್, ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಇರುವ ಕಾರಣ ರಕ್ತ ಹಾಗೂ ಪ್ಲೇಟ್‌ಲೇಟ್‌ಗಳ ಅವಶ್ಯಕತೆ ತುಂಬಾ ಇದೆ. ಆದ್ದರಿಂದ ಎಲ್ಲರೂ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವಂತೆ ಕೋರಿದರು.

ರಕ್ತದ ಅವಶ್ಯಕತೆ ಹಾಗೂ ರಕ್ತದಾನದ ಮಹತ್ವ, ಉಪಯೋಗಗಳ ಕುರಿತು ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ಅರಿವು ಮೂಡಿಸಿದರು. ಕೊಡಗು ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಸೀನಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆಯಲ್ಲಿ ಯಾವುದೇ ಸಂದರ್ಭದಲ್ಲಿ ರಕ್ತದ ಕೊರತೆಯಾಗಬಾರದು. ರಕ್ತದ ಅವಶ್ಯಕತೆ ಇದ್ದಾಗ ತಾವು ಕೈಜೋಡಿಸುವುದಾಗಿ ತಿಳಿಸಿದರಲ್ಲದೆ ರಕ್ತದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಆನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಜಿಲ್ಲಾ ಮೇಲ್ವಿಚಾರಕರಾದ ಸುನಿತಾ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಉಷಾ, ಕಮಲ, ಮುತ್ತಮ್ಮ, ಐಸಿಟಿಸಿ ಆಪ್ತ ಸಮಾಲೋಚಕರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು. ಅತೀ ಹೆಚ್ಚು ರಕ್ತದಾನ ಮಾಡಿದ ರಕ್ತದಾನಿಗಳನ್ನು ಸನ್ಮಾನಿಸಲಾಯಿತು. ಕೊಡಗು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿಗಳು ರಕ್ತದಾನ ಮಾಡಿದರು.

ಎಂ.ಎ. ವಿದ್ಯಾರ್ಥಿ ಅಮೃತ್‌ರಾಜ್ ಪ್ರಾರ್ಥಿಸಿ, ಕೊಡಗು ವಿಶ್ವವಿದ್ಯಾಲಯದ ಉಪನ್ಯಾಸಕ ಡಾ.ಜಮೀರ್ ಅಹಮದ್ ಸ್ವಾಗತಿಸಿದರು. ಕೊಡಗು ವಿಶ್ವವಿದ್ಯಾಲಯದ ಉಪನ್ಯಾಸಕರಾದ ಸುದರ್ಶನ್ ಕುಮಾರ್ ವಂದಿಸಿದರು.