ಸಿದ್ದಾಪುರ, ಜೂ. ೧೫: ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ನೆಲ್ಲಿಹುದಿಕೇರಿ ಗ್ರಾ.ಪಂ. ಎದುರು ಸಿಪಿಐಎಂ ಪಕ್ಷದ ನೆಲ್ಲಿಹುದಿಕೇರಿ ಶಾಖೆ ವತಿಯಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಪಕ್ಷದ ಮುಖಂಡ ಪಿ.ಆರ್. ಭರತ್ ಮಾತನಾಡಿ, ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಸಾರ್ವಜನಿಕರು ಜೀವಭಯದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಕಾಡಾನೆಗಳ ಹಿಂಡು ಕಾಫಿ ತೋಟಗಳಲ್ಲಿ ಬೀಡುಬಿಟ್ಟ ಪರಿಣಾಮ ರೈತರ ಬೆಳೆಗಳು ನಾಶವಾಗುತ್ತಿದೆ. ಸ್ಥಳೀಯ ತೋಟ ಕಾರ್ಮಿಕರು ಕಾಡಾನೆಗಳ ಹಾವಳಿಗೆ ಹೆದರಿ ಕೆಲಸಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದು, ಅರಣ್ಯ ಇಲಾಖೆ ಶಾಶ್ವತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.
ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿನ ರಸ್ತೆಗಳು ಸಂಚಾರಕ್ಕೆ ಯೋಗ್ಯವಲ್ಲದಂತಾಗಿದೆ. ಬಹುತೇಕ ಕಾಂಕ್ರಿಟ್ ರಸ್ತೆಗಳ ಬದಿಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಗಳಲ್ಲಿ ನೀರು ನಿಂತು ರಸ್ತೆ ಹದಗೆಟ್ಟಿದ್ದು, ಕೂಡಲೇ ರಸ್ತೆ ಸಮಸ್ಯೆಯನ್ನು ಬಗೆಹರಿಸಬೇಕೆಂದು ಆಗ್ರಹಿಸಿದರು.
ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ್ದರು. ಈ ಸಂದರ್ಭ ಕಂದಾಯ ಪರಿವೀಕ್ಷಕ ಸಂತೋಷ್, ತಾ.ಪಂ. ಅಧಿಕಾರಿ ಬಾನುಪ್ರಕಾಶ್, ಉಪವಲಯ ಅರಣ್ಯಾಧಿಕಾರಿ ಸುಬ್ರಾಯ, ಪಿಡಿಓ ನಂಜುAಡಸ್ವಾಮಿ, ಗ್ರಾ.ಪಂ. ಉಪಾಧ್ಯಕ್ಷೆ ಪ್ರಮೀಳಾ ಹಾಜರಿದ್ದರು. ಪ್ರತಿಭಟನೆಯಲ್ಲಿ ಕೆ.ಕೆ. ಚಂದ್ರನ್, ಉದಯ ಕುಮಾರ್, ಕೆ. ಶಿವರಾಮನ್, ಯೂಸುಫ್, ಹಬೀಬ್, ಜೋಸ್, ಸೌಕತಲಿ ಇನ್ನಿತರರು ಪಾಲ್ಗೊಂಡಿದ್ದರು.