ಮಡಿಕೇರಿ, ಜು. ೫: ಮುಂದಿನ ಬಜೆಟ್‌ನಲ್ಲಿ ಕೊಡಗು ಜಿಲ್ಲೆಗೆ ಹೃದಯ ಸಂಬAಧಿ ಕಾಯಿಲೆಯ ಚಿಕಿತ್ಸೆ ಉದ್ದೇಶಕ್ಕಾಗಿ ಹೃದ್ರೋಗ ಚಿಕಿತ್ಸಾ ಕೇಂದ್ರ ಘೋಷಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಆರ್. ಶರಣಪ್ರಕಾಶ ಪಾಟೀಲ ಭರವಸೆ ನೀಡಿದರು.

ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ಜಿಲ್ಲಾಸ್ಪತ್ರೆ) ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮಡಿಕೇರಿ ಜಿಲ್ಲಾಸ್ಪತ್ರೆಗೆ ಅಗತ್ಯ ಸೌಲಭ್ಯ ಸರಕಾರದಿಂದ ನೀಡಲಾಗುತ್ತಿದೆ. ನೂತನವಾಗಿ ನಿರ್ಮಾಣವಾಗುತ್ತಿರುವ ಆಸ್ಪತ್ರೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಕಾರ್ಯ ಯೋಜನೆಯೂ ನಡೆಯುತ್ತಿದೆ. ಮಡಿಕೇರಿ ಶಾಸಕ ಮಂತರ್ ಗೌಡ ಪ್ರಯತ್ನದಿಂದ ಜಿಲ್ಲಾಸ್ಪತ್ರೆಯಲ್ಲಿ ಎಂ.ಆರ್.ಐ. ಸೇವೆ ದೊರೆತಿದ್ದು, ೪೫ ದಿನಗಳಲ್ಲಿ ಉದ್ಘಾಟನೆಗೊಳ್ಳಲಿದೆ. ಮುಂದಿನ ಬಜೆಟ್‌ನಲ್ಲಿ ಹೃದ್ರೋಗ ಸಮಸ್ಯೆ ಪರಿಹಾರಕ್ಕೆ ‘ಕಾರ್ಡಿಕ್ ಕೇರ್ ಯೂನಿಟ್’ ಸ್ಥಾಪನೆಯನ್ನು ಪಿಪಿಇ ಮಾದರಿಯಲ್ಲಿ ಜಿಲ್ಲೆಯಲ್ಲಿ ನಡೆಸಲು ಘೋಷಣೆ ಮಾಡಲಾಗುತ್ತದೆ. ಇದರಿಂದ ಹೃದ್ರೋಗ ಸಮಸ್ಯೆಗೆ ತ್ವರಿತ ಹಾಗೂ ತಜ್ಞ ವೈದ್ಯರಿಂದ ಚಿಕಿತ್ಸೆ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಹಂತದಲ್ಲಿದ್ದು, ೩೦೦ ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗೆ ರೂ. ೫೫ ರಿಂದ ೬೦ ಕೋಟಿ ಹಣದ ಅವಶ್ಯಕತೆಯಿದೆ. ಆರ್ಥಿಕ ಇಲಾಖೆ ಮೂಲಕ ಅನುದಾನ ಮಂಜೂರಾತಿಗೆ ಕ್ರಮ ವಹಿಸಲಾಗುತ್ತದೆ ಎಂದು ಭರವಸೆ ನೀಡಿದ ಸಚಿವರು, ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಒತ್ತಡವಿದೆ. ವೈದ್ಯರ ಕೊರತೆಯೂ ಎದ್ದು ಕಾಣುತ್ತಿದೆ. ಅದನ್ನು ನೀಗಿಸಲು ಕ್ರಮವಹಿಸುತ್ತೇನೆ. ಚಿಕ್ಕ ಜಿಲ್ಲೆ ಎನ್ನುವ ಕಾರಣಕ್ಕೆ ವೈದ್ಯರು ಬರಲು ಹಿಂದೇಟು ಹಾಕುತ್ತಿದ್ದಾರೆ. ಯುವ ವೈದ್ಯರು ಒಲವು ತೋರುತ್ತಿದ್ದಾರೆ. ವೈದ್ಯಕೀಯ ಸ್ನಾತಕೋತ್ತರ ಪದವಿ ಶಿಕ್ಷಣಕ್ಕೂ ಅನುಮತಿ ದೊರೆತಿದೆ ಎಂದರು.

ಕಾಮಗಾರಿ - ವ್ಯವಸ್ಥೆ ಕುರಿತು ಪರಿಶೀಲನೆ

ಮೊದಲು ಆಸ್ಪತ್ರೆ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು. ಬಳಿಕ ಜಿಲ್ಲಾಸ್ಪತ್ರೆ ತುರ್ತು ಚಿಕಿತ್ಸಾ ಘಟಕ, ರಕ್ತನಿಧಿ ಕೇಂದ್ರ, ವೈದ್ಯಕೀಯ ಪ್ರಯೋಗಾಲಯ, ಎಂ.ಆರ್.ಐ. ಕೇಂದ್ರ, ಸಿಟಿ ಸ್ಕಾö್ಯನ್ ಕೊಠಡಿಗಳಿಗೆ ತೆರಳಿ ವ್ಯವಸ್ಥೆಯ ಕುರಿತು ಮಾಹಿತಿ ಪಡೆದುಕೊಂಡರು.

ಆಸ್ಪತ್ರೆಯ ‘ಎ ಬ್ಲಾಕ್’ ಸಮೀಪ ನಿರ್ಮಾಣಗೊಳ್ಳುತ್ತಿರುವ ಕ್ರಿಟಿಕಲ್ ಕೇರ್ ಯೂನಿಟ್ ಕಾಮಗಾರಿಯನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಜಿಲ್ಲಾಸ್ಪತ್ರೆಯ ವ್ಯವಸ್ಥೆಯ ಕುರಿತು ಸಚಿವರ ಗಮನಕ್ಕೆ ತಂದರು. ಆಸ್ಪತ್ರೆ ಸಮೀಪವೇ ಇಂದಿರಾ ಕ್ಯಾಂಟೀನ್ ತೆರೆಯುವ ಕೆಲಸವೂ ಪ್ರಕ್ರಿಯೆಯಲ್ಲಿದೆ. ಎಂ.ಆರ್.ಐ. ಘಟಕ ಸದ್ಯದಲ್ಲಿಯೇ ಕಾರ್ಯಾರಂಭ ಮಾಡಲಿದೆ ಎಂದು ಮಾಹಿತಿ ಒದಗಿಸಿದರು.

ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಾಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವರ್ಣಿತ್ ನೇಗಿ,

(ಮೊದಲ ಪುಟದಿಂದ) ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಸುಜಾತ ರಾಥೋಡ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಡಾ. ವಿಶಾಲ್ ಕುಮಾರ್, ವೈದ್ಯಕೀಯ ಅಧೀಕ್ಷಕ ಡಾ. ಸೋಮಶೇಖರ್, ಜಿಲ್ಲಾ ಶಸ್ತçಚಿಕಿತ್ಸಕ ಡಾ. ನಂಜುAಡಯ್ಯ, ಸ್ಥಾನೀಯ ವೈದ್ಯಾಧಿಕಾರಿ ಡಾ. ವಿ.ಎಸ್. ಸತೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಸೇರಿದಂತೆ ಜಿಲ್ಲಾಸ್ಪತ್ರೆಯ ವಿವಿಧ ವಿಭಾಗದ ಮುಖ್ಯಸ್ಥರು, ರಾಜ್ಯ ಸರಕಾರದ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತÀಪ್ಪ ಹಾಜರಿದ್ದರು.