ಕೂಡಿಗೆ, ಜು. ೮: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಗುಂದ ಗ್ರಾಮದಲ್ಲಿರುವ ಹಾರಂಗಿ ಅಣೆಕಟ್ಟೆಯ ಮುಂಭಾಗದಲ್ಲಿರುವ ವೃತ್ತಕ್ಕೆ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರ ಹೆಸರನ್ನು ನಾಮಕರಣ ಮಾಡಲು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರು ಒಕ್ಕೊರಲಿನಿಂದ ತೀರ್ಮಾನ ಕೈಗೊಳ್ಳಲಾಗಿದೆ.

ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯು ಅಧ್ಯಕ್ಷ ಭಾಸ್ಕರ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮ ಪಂಚಾಯಿತಿಗೆ ಕನ್ನಡಸಿರಿ ಸ್ನೇಹ ಬಳಗದ ವತಿಯಿಂದ ಹಾರಂಗಿ ಅಣೆಕಟ್ಟೆಯ ಮುಂಭಾಗದ ವೃತ್ತಕ್ಕೆ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರ ಹೆಸರನ್ನು ಇಡುವ ವಿಷಯವಾಗಿ ಮನವಿ ಸಲ್ಲಿಸಲಾಗಿತ್ತು. ಈ ಬಗ್ಗೆ ಸಾಮಾನ್ಯ ಸಭೆಯಲ್ಲಿ ಚರ್ಚೆಗಳು ನಡೆದು ಸದಸ್ಯರ ಅಭಿಪ್ರಾಯದ ಅನುಗುಣವಾಗಿ ವೀರೇಂದ್ರ ಪಾಟೀಲ್ ಅವರ ಹೆಸರನ್ನು ನಾಮಕರಣ ಮಾಡಲು ತೀರ್ಮಾನ ತೆಗೆದುಕೊಳ್ಳಲಾಯಿತು.