ಸೋಮವಾರಪೇಟೆ, ಜು. ೧೩: ರಾಜ್ಯ ೭ನೇ ವೇತನ ಆಯೋಗವು ಸರಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಹೊರಡಿಸಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಘಟಕವು ಶಾಸಕ ಡಾ. ಮಂತರ್ಗೌಡ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿತು.
ಇದರೊಂದಿಗೆ ಎನ್.ಪಿ.ಎಸ್. ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭ ಸರಕಾರಿ ನೌಕರರ ಸಂಘದ ಅಧ್ಯಕ್ಷ ಪ್ರದೀಪ್, ಕಾರ್ಯದರ್ಶಿ ಎನ್.ಎಂ. ನಾಗೇಶ್, ಸಂಘಟನಾ ಕಾರ್ಯದರ್ಶಿ ಗೋಪಿನಾಥ್, ಗೌರವಾಧ್ಯಕ್ಷ ಪ್ರಸನ್ನ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್, ತಾಲೂಕು ಘಟಕದ ಅಧ್ಯಕ್ಷ ಬಸವರಾಜು, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರತ್ನಕುಮಾರ್, ಉಪಾಧ್ಯಕ್ಷ ಯಶ್ವಂತ್ಕುಮಾರ್, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಪಿಲಿಪ್ ವಾಸ್ ಮತ್ತಿತರರು ಇದ್ದರು.