ಸೋಮವಾರಪೇಟೆ, ಜು. ೨೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಇಲ್ಲಿನ ಕೊಡವ ಸಮಾಜ ಸಭಾಂಗಣದಲ್ಲಿ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯ ಅಧಿಕಾರಿ ಶ್ರೀದೇವಿ ಉದ್ಘಾಟಿಸಿದರು. ನಂತರ ಮಾತನಾಡಿ, ಮಹಿಳೆಯರು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮತ್ತು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ. ಯಾವಾಗ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರುತ್ತಾರೋ ಅಂದು ರಾಮ ರಾಜ್ಯ ನಿರ್ಮಾಣ ಮಾಡಲು ಸಾಧ್ಯ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಸುಂಟಿಕೊಪ್ಪ ಪೊಲೀಸ್ ಠಾಣೆಯ ಮುಖ್ಯ ಪೇದೆ ಆಶಾ ಮಾತನಾಡಿ, ಇಂದು ಸಮಾಜದಲ್ಲಿ ಮಾದಕ ದ್ರವ್ಯದ ಹಾವಳಿ ಹೆಚ್ಚಳದಿಂದಾಗಿ ಯುವಜನರ ಬದುಕು ಬೀದಿಗೆ ಬರುತ್ತಿದೆ. ಎಲ್ಲಿ ನೋಡಿದರೂ ಮಾದಕ ವ್ಯಸನಿಗಳ ಹಾವಳಿ ಹೆಚ್ಚಾಗಿದೆ. ಇದರಲ್ಲಿ ತಮ್ಮ ಮಕ್ಕಳು ಸಿಲುಕದ ಹಾಗೆ ಪೋಷಕರು ಎಚ್ಚರ ವಹಿಸಬೇಕಿದೆ. ಉತ್ತಮ ಶಿಕ್ಷಣ ನೀಡುವುದರೊಂದಿಗೆ ಅವರನ್ನು ಸಮಾಜದಲ್ಲಿ ಗೌರವಯುತ ಜೀವನ ನಡೆಸಲು ಅವಕಾಶ ಮಾಡಿಕೊಡಬೇಕು ಎಂದರು.

೧೮ ವರ್ಷ ತುಂಬದ ಮಕ್ಕಳಿಗೆ ವಾಹನ ಚಾಲನೆಗೆ ಅವಕಾಶ ನೀಡಬಾರದು. ಏನಾದರೂ ಅನಾಹುತ ಸಂಭವಿಸಿದಲ್ಲಿ ಅದಕ್ಕೆ ಪೋಷಕರು ಮತ್ತು ಅವರಿಗೆ ವಾಹನ ನೀಡಿದವರು ಹೊಣೆಯಾಗುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸುಜ್ಞಾನ ಯೋಜನೆಯಡಿ ಪ್ರೋತ್ಸಾಹ ಧನ ವಿತರಿಸಲಾಯಿತು. ಸಂಪೂರ್ಣ ಸುರಕ್ಷಾ ಆರೋಗ್ಯ ಯೋಜನೆಯಡಿ ನೆರವು ಹಾಗೂ ವಾತ್ಸಲ್ಯ ಯೋಜನೆಯಡಿ ವೃದ್ಧ ನಿರ್ಗತಿಕರಿಗೆ ಆರ್ಥಿಕ ನೆರವು ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಉಪಾಧ್ಯಕ್ಷೆ ಉಷಾ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಜನಜಾಗೃತಿ ಸಮಿತಿ ಸ್ಥಾಪಕ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್, ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ, ಜನಜಾಗೃತಿ ಸಮಿತಿ ಸದಸ್ಯ ಸುರೇಶ್ ಮಸಗೋಡು ಇದ್ದರು.