ಕುಶಾಲನಗರ, ಆ. ೨: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ, ಕುಶಾಲನಗರ ಪ್ರಸ್‌ಕ್ಲಬ್ ಟ್ರಸ್ಟ್ ಸಹಯೋಗದೊಂದಿಗೆ ನಡೆದ ಪತ್ರಿಕಾ ದಿನಾಚರಣೆ ಹಾಗೂ ಕಾವೇರಿ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು.

ಕುಶಾಲನಗರ ಗಾಯತ್ರಿ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ರಂಜನ್, ಸಮಾಜದ ಅಭಿವೃದ್ಧಿ ಮತ್ತು ಏಳಿಗೆಯಲ್ಲಿ ಪತ್ರಿಕಾ ಕ್ಷೇತ್ರದ ಪಾತ್ರ ಪ್ರಮುಖದ್ದಾಗಿದೆ ಎಂದರು. ಪತ್ರಕರ್ತರು ಹಾಗೂ ಮಾಧ್ಯಮ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸ ಬೇಕಾಗಿದೆ ಎಂದು ಹೇಳಿದರು.

ನಿವೃತ್ತ ಶಿಕ್ಷಕ ಉ.ರಾ. ನಾಗೇಶ್ ಮುಖ್ಯ ಭಾಷಣಕಾರರಾಗಿ ಮಾತನಾಡಿ, ಸಮಾಜದ ೪ನೇ ಅಂಗವಾದ ಪತ್ರಿಕಾ ರಂಗವು ತುಂಬಾ ಮಹತ್ವವಾದ ಅಂಗವಾಗಿದೆ. ಪತ್ರಿಕೆಯನ್ನು ಓದುವ ಮೂಲಕ ಸಾಮಾನ್ಯ ಜ್ಞಾನ ಗಳಿಸಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರೆಸ್‌ಕ್ಲಬ್ ಟ್ರಸ್ಟ್ ಅಧ್ಯಕ್ಷ ಹೆಚ್.ಎಂ. ರಘು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಪೊಲೀಸ್ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್, ಆರ್.ಕೆ. ನಾಗೇಂದ್ರ ಬಾಬು, ಬಿ.ಎಸ್. ಸದಾಶಿವ ಶೆಟ್ಟಿ, ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಹೆಚ್.ಜೆ. ದಾಮೋಧರ್, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕಿ ದೀಪಾ ಪೂಜಾರಿ, ದಲಿತ ಸಂಘರ್ಷ ಸಮಿತಿಯ ಕೆ.ಬಿ. ರಾಜು ಹಾಗೂ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮ್ ಕುಮಾರ್ ಮತ್ತಿತರರು ಇದ್ದರು.