ಮಡಿಕೇರಿ, ಆ. ೩: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆ ಹಾಗೂ ವಿವಿಧ ಸಂಘ-ಸAಸ್ಥೆಗಳ ವತಿಯಿಂದ ಚೆಂಬು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಮಡಿಕೇರಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಡಾ. ಸಂಪತ್ ಹಾಗೂ ಚೆಂಬು ಶಾಲೆಯ ಪ್ರಬಾರ ಮುಖ್ಯ ಶಿಕ್ಷಕ ಡಾ. ಯೋಗೇಶ್ ಉದ್ಘಾಟಿಸಿದರು. ನಂತರ ಮಾತನಾಡಿದ ಡಾ. ಸಂಪತ್, ರಕ್ತದಾನ ಮಹತ್ವದ ಕುರಿತು ವಿವರಿಸಿ ಜನರಲ್ಲಿ ಜಾಗೃತಿ ಮೂಡಿಸಿದರು. ಡಾ. ಯೋಗೇಶ್ ಮಾತನಾಡಿ, ರಕ್ತದಾನ ಮಾಡುವುದರಿಂದ ಆಗುವ ಆರೋಗ್ಯದ ಅನುಕೂಲತೆ ಬಗ್ಗೆ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಚೆಂಬು ಪ್ರೌಢಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ರಮೇಶ್ ಕುಮಾರ್ ನಂಬಿಯಾರ್, ರಕ್ತದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ. ಸ್ಕೌಟ್ಸ್ ಮತ್ತು ಗೈಡ್ಸ್ ಚೆಂಬು ಸ್ಥಳೀಯ ಸಂಸ್ಥೆ ಉತ್ತಮ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಮಾದರಿಯಾಗಿದೆ ಎಂದು ಶ್ಲಾಘಿಸಿದರು. ನಿವೃತ್ತ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿ, ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಕುದುರೆಪಾಯ ದೇವಿ ಭಜನಾ ಮಂಡಳಿಯ ಅಧ್ಯಕ್ಷ ಸತೀಶ್ ಪಾಡಿಕಾನ, ಚೆಂಬು ಗರುಡ ಯುವ ಬಳಗದ ಅಧ್ಯಕ್ಷ ಯಶ್ವಿನ್ ಬಾಲಂಬಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚೆಂಬು ಒಕ್ಕೂಟದ ಉಪಾಧ್ಯಕ್ಷ ಸದಾನಂದ, ನಿವೃತ್ತ ಮುಖ್ಯ ಶಿಕ್ಷಕರಾದ ದೇಚಮ್ಮ, ಯಮುನಾ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಸಂಘಟಕಿ ಯು.ಎಸ್. ದಮಯಂತಿ, ಚೆಂಬುವಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ರಕ್ತದಾನಿಗಳು, ಶಾಲೆಯ ಶಿಕ್ಷಕರು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು. ಕವಿತಾ ಪ್ರಾರ್ಥಿಸಿ, ಶಿಕ್ಷಕಿ ಸರಿತಾ ವಂದಿಸಿದರು.

ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಕೆ.ಟಿ. ಉಷಾರಾಣಿ ಸ್ವಾಗತಿಸಿ, ಸನ್ಮಾನಿತರ ಕಿರುಪರಿಚಯ ಮಾಡಿದರು. ಸುಮಾರು ೨೬ ಯೂನಿಟ್ ರಕ್ತವನ್ನು ದಾನಿಗಳಿಂದ ಸಂಗ್ರಹಿಸಲಾಯಿತು. ಚೆಂಬು ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಗಣಿತ ಶಿಕ್ಷಕ ಕೆ.ಯು. ರಂಜಿತ್ ಅವರನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆ ಹಾಗೂ ಶಾಲೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.