ಮುಳ್ಳೂರು, ಆ. ೩೦: ‘ವ್ಯಕ್ತಿಯ ಸದೃಢವಾದ ಮಾನಸಿಕ ಮತ್ತು ದೈಹಿಕ ಆರೋಗ್ಯ ಬೆಳವಣಿಗೆಗೆ ಕ್ರೀಡೆಯು ಪೂರಕ ಶಕ್ತಿಯಾಗಿದೆ’ ಎಂದು ಆಲೂರುಸಿದ್ದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಅಭಿಪ್ರಾಯಪಟ್ಟರು. ಸಮೀಪದ ಆಲೂರುಸಿದ್ದಾಪುರ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಗ್ರಾಮೀಣ ಕ್ರೀಡಾಂಗಣದಲ್ಲಿ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಹಾಗೂ ಆಲೂರುಸಿದ್ದಾಪುರ ಸರಕಾರಿ ಪ.ಪೂ.ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳ ಶನಿವಾರಸಂತೆ ವಲಯ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಆರೋಗ್ಯ ಬೆಳವಣಿಗೆ ಮತ್ತು ಕ್ರೀಡಾ ಕ್ಷೇತ್ರದ ಬೆಳವಣಿಗೆಗಾಗಿ ಕ್ರೀಡಾಕೂಟಗಳನ್ನು ನಡೆಸಲಾಗುತ್ತದೆ ವಿದ್ಯಾರ್ಥಿಗಳು ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸಿಕೊಂಡು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕೆಂದರು.

ತಾಲೂಕು ದೈಹಿಕ ಶಿಕ್ಷಣ ಇಲಾಖೆಯ ಪರಿವೀಕ್ಷಕಿ ಸುಕುಮಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂದಿನ ವೈಜ್ಞಾನಿಕ ಭರಾಟೆಯಲ್ಲಿ ಕ್ರೀಡೆಯ ಮಹತ್ವವನ್ನು ಕಳೆದುಕೊಳ್ಳುತ್ತಿವೆ. ಸ್ಫ್ಪೂರ್ತಿದಾಯಕವಾದ ಕ್ರೀಡಾಕ್ಷೇತ್ರವನ್ನು ಮುನ್ನಡೆಸಲು ಶಾಲಾ-ಕಾಲೇಜು ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕೆಂದರು. ಆಲೂರುಸಿದ್ದಾಪುರ ಪಿಡಿಓ ಹರೀಶ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಂಕನಹಳ್ಳಿ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಜಿ.ಎಂ.ಹೇಮAತ್, ಆಲೂರು ಸಿದ್ದಾಪುರ ಮೊರಾರ್ಜಿ ವಸತಿ ಶಾಲಾ ಪ್ರಾಂಶುಪಾಲೆ ಕೆ.ಆರ್.ಭಾರತಿ, ದಾನಿ ಮತ್ತು ಲೋಕೋಪಯೋಗಿ ಇಲಾಖೆಯ ನಿವೃತ್ತ ಅಭಿಯಂತರ ಸೋಮೇಶ್ ಮಾತನಾಡಿದರು.

ಕಾರ್ಯಕ್ರಮದಲಿಲ್ಲಿ ಆಲೂರುಸಿದ್ದಾಪುರ ಗ್ರಾ.ಪಂ. ಅಧ್ಯಕ್ಷೆ ಮೀನಾಕ್ಷಿ, ಸದಸ್ಯೆ ದಮಯಂತಿ ಕರುಂಬಯ್ಯ, ಆಲೂರುಸಿದ್ದಾಪುರ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಸೋಮಶೇಖರ್, ಎಸ್‌ಡಿಎಂಸಿ ಉಪಾಧ್ಯಕ್ಷ ಪೊನ್ನಪ್ಪ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ಕರುಂಬಯ್ಯ, ಶನಿವಾರಸಂತೆ ವಿಘ್ನೇಶ್ವರ ಪ.ಪೂ.ಕಾಲೇಜಿನ ಪ್ರಾಂಶುಪಾಲ ಟಿ.ಪಿ.ಶಿವಪ್ರಕಾಶ್ ಮುಂತಾದವರು ಹಾಜರಿದ್ದರು.

ಗ್ರಾ.ಪಂ.ಅಧ್ಯಕ್ಷೆ ಮೀನಾಕ್ಷಿ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಹರೀಶ್ ಕ್ರೀಡಾಜ್ಯೋತಿ ಸ್ವೀಕರಿಸಿ ಓಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.