ಕುಶಾಲನಗರ, ಸೆ. ೬ : ಶಾಲಾ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಹಾಗೂ ಕುಶಾಲನಗರ ಕ್ಲಸ್ಟರ್ ಕೇಂದ್ರದ ಆಶ್ರಯದಲ್ಲಿ ಜ್ಞಾನಭಾರತಿ ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಿದ್ದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದ ವಿವಿಧ ಶಾಲೆಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜ್ಞಾನಭಾರತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಜಿ.ಎಲ್. ನಾಗರಾಜ್, ಪ್ರತಿಭಾ ಕಾರಂಜಿ ಸ್ಪರ್ಧೆಯು ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತರುತ್ತದೆ. ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಜೀವನ ಕೌಶಲ್ಯವನ್ನು ಹೊಂದಲು ವೇದಿಕೆಯಾಗಿದೆ ಎಂದರು.
ಮಕ್ಕಳಲ್ಲಿ ಉತ್ತಮ ಪ್ರತಿಭೆಯನ್ನು ಅನಾವರಣಗೊಳಿಸಲು ಶಿಕ್ಷಕರೊಂದಿಗೆ ಪೋಷಕರು ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.
ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಬಿ.ಎನ್.ಪುಷ್ಪ ಮಾತನಾಡಿ, ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಹೊರತರಲು ಉತ್ತಮ ಅವಕಾಶವನ್ನು ನೀಡುತ್ತದೆ ಎಂದರು.
ನಿವೃತ್ತ ಚಿತ್ರಕಲಾ ಶಿಕ್ಷಕ ಉ.ರಾ. ನಾಗೇಶ್ ಮಾತನಾಡಿ, ವಿದ್ಯಾರ್ಥಿಗಳ ಬಹುಮುಖ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ ಒದಗಿಸುವ ಪ್ರತಿಭಾ ಕಾರಂಜಿ ಸ್ಪರ್ಧೆಯು ಮಕ್ಕಳ ಕಲಿಕೆಗೆ ಪ್ರೇರಕಶಕ್ತಿಯಾಗಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಟಿ.ಈ. ವಿಶ್ವನಾಥ್, ಮಕ್ಕಳ ಪ್ರತಿಭೆಯ ಸ್ಪರ್ಧೆಗಳ ಕುರಿತು ಮಾಹಿತಿ ನೀಡಿದರು.
ಮಕ್ಕಳು ವಿವಿಧ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದರು. ಮಕ್ಕಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಕಂಠಪಾಠ, ಧಾರ್ಮಿಕ ಪಠಣ, ಛದ್ಮವೇಷ ಸ್ಪರ್ಧೆ, ರಸಪ್ರಶ್ನೆ, ರಂಗೋಲಿ, ಜಾನಪದ ಗೀತೆ, ಕವ್ವಾಲಿ, ಕ್ಲೇ ಮಾಡಲಿಂಗ್, ಭಾಷಣ ಮತ್ತು ಪ್ರಬಂಧ ಸ್ಪರ್ಧೆ ಸೇರಿದಂತೆ ಮುಂತಾದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರತಿಭೆ ಅನಾವರಣಗೊಳಿಸಿದರು.