ಕೂಡಿಗೆ, ಸೆ. ೬ : ಗೌರಿ- ಗಣೇಶ ಹಬ್ಬದ ಸಂದರ್ಭದಲ್ಲಿ ಜನರು ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ರಾಷ್ಟಿçÃಯ ಹಸಿರು ಪಡೆ ಇಕೋ ಕ್ಲಬ್‌ನ ಕೊಡಗು ಜಿಲ್ಲಾ ನೋಡಲ್ ಅಧಿಕಾರಿ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ ಮನವಿ ಮಾಡಿದ್ದಾರೆ.

ತಾ. ೬ ಮತ್ತು ೭ ರಂದು ನಡೆಯಲಿರುವ ಗೌರಿ-ಗಣೇಶೋತ್ಸವ ಆಚರಣೆ ಅಂಗವಾಗಿ `ನಮ್ಮ ನಡೆ ಹಸಿರೆಡೆಗೆ' ಅಭಿಯಾನದಡಿ (ಗೋ ಗ್ರೀನ್ ಕ್ಯಾಂಪೈನ್) ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ-೨೦೨೪ ಕುರಿತು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿಯ ಸಹಭಾಗಿತ್ವದಲ್ಲಿ ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆ, ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ. ವತಿಯಿಂದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ರಾಷ್ಟಿçÃಯ ಹಸಿರುಪಡೆ ಇಕೋ ಕ್ಲಬ್, ರಾಷ್ಟಿçÃಯ ಸೇವಾ ಯೋಜನೆ (ಎನ್.ಎಸ್.ಎಸ್.), ಸ್ಕೌಟ್ಸ್ ಮತ್ತು ಗೈಡ್ಸ್ನ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಪರಿಸರ ಜನಜಾಗೃತಿ ಆಂದೋಲನದಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವ ಕುರಿತು ಅವರು ಮಾಹಿತಿ ನೀಡಿದರು.

ಪ್ರತಿಯೊಬ್ಬರೂ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಮಾಲಿನ್ಯ ತಡೆಗಟ್ಟಿ ಸುಸ್ಥಿರ ಪರಿಸರ ಸಂರಕ್ಷಣೆಗೆ ಸಹಕರಿಸಬೇಕು ಎಂದು ಕೋರಿದರು.

ಶಾಲೆಯ ಇಕೋ ಕ್ಲಬ್‌ನ ಉಸ್ತುವಾರಿ ಶಿಕ್ಷಕಿ ಬಿ.ಡಿ. ರಮ್ಯ ಮಾತನಾಡಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ನದಿ, ಕೆರೆ ಮತ್ತಿತರ ಜಲಮೂಲಗಳಿಗೆ ವಿಸರ್ಜಿಸುವುದರಿಂದ ಜಲಚರಗಳು ಸೇರಿದಂತೆ ಜಲ ಮಾಲಿನ್ಯ ಉಂಟಾಗುವುದನ್ನು ತಡೆಗಟ್ಟುವ ದಿಸೆಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ ಪ್ರತಿಷ್ಠಾಪಿಸಲು ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಶಾಲೆಯ ಎಂಟನೆಯ ತರಗತಿಯ ವಿದ್ಯಾರ್ಥಿನಿ ನಿಹಾನ ಮಾತನಾಡಿ, ನಾವೆಲ್ಲರೂ ಮಣ್ಣಿನ ಗಣೇಶ ಮೂರ್ತಿ ತಯಾರಿಕೆ ಬಗ್ಗೆ ಜನಜಾಗೃತಿ ಮೂಡಿಸಲು ಪಣತೊಡಬೇಕು ಎಂದು ಹೇಳಿದಳು.

ಶಾಲೆಯ ಶಿಕ್ಷಕರಾದ ಕೆ. ಗೋಪಾಲಕೃಷ್ಣ ಮತ್ತು ಬಿ.ಎಸ್. ಅನ್ಸಿಲಾ ರೇಖಾ ಮಕ್ಕಳಿಗೆ ಮಣ್ಣಿನ ಗಣೇಶ ಮೂರ್ತಿ ತಯಾರಿಕೆಗೆ ಸಹಕರಿಸಿದರು.

ಶಾಲಾ ನಾಯಕ ಗೌತಮ್, ಶಿಕ್ಷಕರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಇದ್ದರು.

ನಂತರ ಕೂಡ್ಲೂರು ಗ್ರಾಮದಲ್ಲಿ ಪರಿಸರ ಜಾಥಾ ನಡೆಸಿದ ವಿದ್ಯಾರ್ಥಿಗಳು ಜನರಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ ಪ್ರತಿಷ್ಠಾಪಿಸಲು ಜಾಗೃತಿ ಮೂಡಿಸಿದರು.