ಪೊನ್ನಂಪೇಟೆ, ಸೆ. ೧೦: ಕೊಡವ ಮುಸ್ಲಿಂ ಅಸೋಸಿ ಯೇಷನ್ (ಕೆ.ಎಂ.ಎ.)ನ ಸ್ಥಾಪಕ ಅಧ್ಯಕ್ಷರೂ ಆಗಿರುವ ಹಿರಿಯ ಪತ್ರಕರ್ತ ಮತ್ತು ಕಿತ್ತಳೆ ನಾಡು ಕನ್ನಡ ವಾರಪತ್ರಿಕೆಯ ಪ್ರಧಾನ ಸಂಪಾದಕರಾದ ಕುವೇಂಡ ವೈ. ಹಂಝತುಲ್ಲಾ ಅವರಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ೨೦೨೨ನೇ ಸಾಲಿನ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ಅಕಾಡೆಮಿ ಅಧ್ಯಕ್ಷ ಯು.ಹೆಚ್. ಉಮರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕುವೇಂಡ ವೈ. ಹಂಝತುಲ್ಲಾ ಅವರು, ಕಡಲ ತೀರದ ಶಿಕ್ಷಣ ಪ್ರೇಮಿ, ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ ಅವರಿಂದ ಈ ಗೌರವ ಪ್ರಶಸ್ತಿಯನ್ನು ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವ ವಿದ್ಯಾಲಯದ ಬ್ಯಾರಿ ಅಧ್ಯಯನ ಪೀಠದ ಸಂಯೋಜಕರಾದ ಡಾ. ಅಬೂಬಕ್ಕರ್ ಸಿದ್ದೀಕ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಜೋಕಿಂ ಆಳ್ವಾರಿಸ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಬಂಟ್ವಾಳ ಮೂಡದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಅಬ್ದುಲ್ ರಜಾಕ್ ಅನಂತಾಡಿ ಸೇರಿದಂತೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರು, ಬ್ಯಾರಿ ಸಮುದಾಯದ ಸಾಮಾಜಿಕ ಶೈಕ್ಷಣಿಕ ಹಾಗೂ ಸಾಹಿತ್ಯ ಕ್ಷೇತ್ರದ ಪ್ರಮುಖರು ಭಾಗವಹಿಸಿದ್ದರು.