ಮಡಿಕೇರಿ, ಸೆ. ೧೦: ಗ್ರಾಮ ಮಟ್ಟದಲ್ಲಿ ಜನರ ಆರೋಗ್ಯ ವನ್ನು ಉತ್ತಮಪಡಿಸುವಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮ ಅತ್ಯಂತ ಉಪಯೋಗಕಾರಿ ಯಾಗಿದೆ ಎಂದು ಕೊಡಗು ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಜಿ. ಧನರಾಜು ಅವರು ತಿಳಿಸಿದರು.

ನಗರದ ಜಿ.ಪಂ. ಕಚೇರಿಯಲ್ಲಿ ನಡೆದ ಗ್ರಾಮ ಆರೋಗ್ಯ ಕಾರ್ಯಕ್ರಮದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮಕ್ಕೆ ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮೀಣ ಜನರಿಗೆ ಆರೋಗ್ಯದ ಕುರಿತು ಜ್ಞಾನ ಮತ್ತು ಅರಿವನ್ನು ಮೂಡಿಸುವುದು ಗ್ರಾಮ ಆರೋಗ್ಯ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಈ ಮಹತ್ತರ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ೨ ದಿನಗಳ ಕಾಲ ತರಬೇತಿ ನಡೆಯಲಿದೆ ಎಂದರು.

ಈ ತರಬೇತಿ ಕಾರ್ಯಕ್ರಮದಲ್ಲಿ ಅಪೌಷ್ಟಿಕತೆ, ರಕ್ತಹೀನತೆ, ಮುಟ್ಟಿನ ನೈರ್ಮಲ್ಯ, ಕ್ಷಯ, ಅಸಂಕ್ರಾಮಿಕ ರೋಗಗಳಾದ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ, ಮಾನಸಿಕ ಆರೋಗ್ಯ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ ಎಂದರು.

ಈ ಕಾರ್ಯಕ್ರಮ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ನಡೆಯುತ್ತಿದೆ. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಸಿಡಿಪಿಒ ಮತ್ತು ವಲಯ ಆರೋಗ್ಯ ಮತ್ತು ಶಿಕ್ಷಣಾಧಿಕಾರಿಗಳಿಗೆ ತರಬೇತಿ ಕೊಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್‌ಕುಮಾರ್ ಅವರು ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಈ ವಿಷಯಗಳ ಕುರಿತು ಕನಿಷ್ಟ ೩-೪ ಗಂಟೆಗಳ ಕಾಲ ಈ ಕಾಯಿಲೆಗಳ ಕುರಿತು ವಿಶೇಷ ಸಭೆಯಲ್ಲಿ ಹಂಚಿಕೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ತರಬೇತಿಯನ್ನು ಪಡೆದ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡುತ್ತಾರೆ ಎಂದು ಅವರು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೆಶಕರಾದ ನಟರಾಜ್ ಅವರು ಮಾತನಾಡಿ, ಗ್ರಾಮ ಮಟ್ಟದಲ್ಲಿ ಮಕ್ಕಳ ಅಪೌಷ್ಟಿಕತೆಯ ಬಗ್ಗೆ ಪತ್ತೆಹಚ್ಚಿ ಪರಿಹಾರ ಸೂಚಿಸುವಲ್ಲಿ ಈ ಕಾರ್ಯಕ್ರಮ ಪ್ರಮುಖ ಪಾತ್ರ ವಹಿಸಲಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳಾಗಿ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ಮಧುಸೂಧನ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಆನಂದ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶ್ರೀನಿವಾಸ್ ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ತಜ್ಞರಾದ ಡಾ. ಡೆವಿನ್ ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮದ ರಾಜ್ಯ ಸಂಯೋಜನಾಧಿಕಾರಿ ಡಾ.ಶಶಿಕುಮಾರ್ ಡಿ.ಜೆ, ಕೆ.ಹೆಚ್.ಪಿ.ಟಿ.ಯ ಶಶಿಧರ್ ಇತರರು ಹಾಜರಿದ್ದರು.