ಚೆಯ್ಯಂಡಾಣೆ, ಅ. ೧೦: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಾಪೋಕ್ಲು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಆರೋಗ್ಯ ತರಬೇತಿ ಶಿಬಿರ ನಡೆಯಿತು.

ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಅಧ್ಯಕ್ಷತೆ ವಹಿಸಿದ್ದರು. ಶಿಬಿರದಲ್ಲಿ ಪ್ರಬಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಅಶೋಕ್ ಮಾತನಾಡಿ, ಬಾಲ್ಯ ವಿವಾಹ ಮತ್ತು ಮುಟ್ಟಿನ ನೈರ್ಮಲ್ಯತೆ ಬಗ್ಗೆ ಮಾಹಿತಿ ನೀಡಿದರು. ಅಸಾಂಕ್ರಾಮಿಕ ರೋಗಗಳು, ಕ್ಷಯರೋಗ, ಮಾನಸಿಕ ಆರೋಗ್ಯದ ಬಗ್ಗೆ ಅಪೌಷ್ಟಿಕತೆ, ರಕ್ತ ಹೀನತೆಯ ಬಗ್ಗೆ ತಾಲೂಕು ಆರೋಗ್ಯಾಧಿಕಾರಿ ಡಾ. ಚೇತನ್ ಸವಿಸ್ತಾರವಾಗಿ ಮಾಹಿತಿ ನೀಡಿದರು.

ಈ ಸಂದರ್ಭ ನಾಪೋಕ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ, ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ, ಸದಸ್ಯರಾದ ಕುಲ್ಲೇಟಿರ ಅರುಣ್ ಬೇಬ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.