ಮಡಿಕೇರಿ, ಅ. ೨೯: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಹಾಗೂ ಎನ್.ಎಸ್.ಎಸ್. ಸಂಯುಕ್ತಾಶ್ರಯದಲ್ಲಿ ಮಡಿಕೇರಿ ನಗರದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಇಕೋ ಕ್ಲಬ್, ಎನ್.ಎಸ್.ಎಸ್. ಘಟಕಗಳ ಸಹಯೋಗದೊಂದಿಗೆ ನಮ್ಮ ನಡೆ ಹಸಿರೆಡೆಗೆ ಗೋ ಗ್ರೀನ್ ಅಭಿಯಾನ ೨೦೨೪ರÀಡಿ ಸ್ವಚ್ಛ ದೀಪಾವಳಿ, ಸ್ವಸ್ಥ ದೀಪಾವಳಿ - ೨೦೨೪ ರತ್ತ ನಮ್ಮ ಹೆಜ್ಜೆ” ಎಂಬ ಪರಿಸರ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.

ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾಲಿನ್ಯಕಾರಿ ಪಟಾಕಿ ಸಿಡಿಸುವುದನ್ನು ಬಿಟ್ಟು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಪರಿಸರ ಸ್ನೇಹಿ ಹಸಿರು ದೀಪಾವಳಿಯನ್ನು ಆಚರಿಸುವುದಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರತಿಜ್ಞೆ ಸ್ವೀಕರಿಸಿದರು.

ಹಸಿರು ದೀಪಾವಳಿ ಆಚರಣೆ ಕುರಿತ ಮಾಹಿತಿಯುಳ್ಳ ಕರಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ. ರಂಗಧಾಮಪ್ಪ, ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತು ಶಾಲಾ- ಕಾಲೇಜಿನ ವಿದ್ಯಾರ್ಥಿಗಳು ಹಾಗೂ ನಾಗರಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಶಿಕ್ಷಕರು ಪಾಲ್ಗೊಳ್ಳಬೇಕು.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಪ್ರಾರ್ಥನಾ ಸಭೆಯ ವೇಳೆ ಮಾಲಿನ್ಯಕಾರಕ ಪಟಾಕಿಗಳನ್ನು ಸಿಡಿಸುವುದರಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿ ಗಳಲ್ಲಿ ಜಾಗೃತಿ ಮೂಡಿಸುವಂತೆ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಶಾಲೆಗಳಲ್ಲಿ ಇಕೋ ಕ್ಲಬ್‌ಗಳ ಮೂಲಕವೂ ಜಾಗೃತಿ ಮೂಡಿಸಬೇಕು ಎಂದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ ಮಾತನಾಡಿ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾಲಿನ್ಯಕಾರಿ ಪಟಾಕಿ ಸಿಡಿಸುವುದನ್ನು ತ್ಯಜಿಸಿ ಪರಿಸರ ಸಂರಕ್ಷಣೆಗಾಗಿ ದೀಪ ಬೆಳಗಿಸಿ ಮಾಲಿನ್ಯ ತಡೆಗಟ್ಟಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಹಸಿರು ದೀಪಾವಳಿ ಆಚರಣೆಯ ಮಹತ್ವದ ಕುರಿತು ಮಾಹಿತಿ ನೀಡಿದ ಹಸಿರು ದೀಪಾವಳಿ ಆಚರಣೆಯ ಸಂಘಟಕರೂ ಆದ ಕೊಡಗು ಜಿಲ್ಲಾ ಪರಿಸರ ಜಾಗೃತಿ ಅಭಿಯಾನದ ಸಂಚಾಲಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿದರು.

ಹಸಿರು ದೀಪಾವಳಿ ಆಚರಣೆ ಕುರಿತ ಪ್ರತಿಜ್ಞಾ ವಿಧಿ ಬೋಧಿಸಿದ ಮಡಿಕೇರಿ ಬಿಇಓ ಬಿ.ಸಿ.ದೊಡ್ಡೇಗೌಡ ಮಾತನಾಡಿ, ವಿದ್ಯಾರ್ಥಿಗಳು ಸ್ವಚ್ಛ ಹಾಗೂ ಸ್ವಸ್ಥ ಪರಿಸರ ಸಂರಕ್ಷಣೆಗಾಗಿ ಪಟಾಕಿ ತ್ಯಜಿಸಿ ಹಣತೆ ಬೆಳಗಿಸಿ ಸ್ವಚ್ಛ ಹಾಗೂ ಸ್ವಸ್ಥ ಹಸಿರು ದೀಪಾವಳಿ ಆಚರಿಸುವ ಮೂಲಕ ಜನರಿಗೆ ಪರಿಸರ ಪ್ರಜ್ಞೆ ಮೂಡಿಸಬೇಕು ಎಂದರು.

ಶಿಕ್ಷಣ ಇಲಾಖೆಯ ಡಿವೈಪಿಸಿ ಎಂ.ಕೃಷ್ಣಪ್ಪ, ಬಿ ಆರ್ ಸಿ ಕೆ.ಪಿ. ಗುರುರಾಜ್, ಜಿಲ್ಲಾ ಸ್ಕೌಟ್ಸ್ ಸಂಸ್ಥೆಯ ಆಯುಕ್ತ ಜಿಮ್ಮಿ ಸಿಕ್ವೇರಾ, ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಸಹ ಕಾರ್ಯದರ್ಶಿ ಬೊಳ್ಳಜ್ಜಿರ ಬಿ.ಅಯ್ಯಪ್ಪ, ತರಬೇತಿ ಆಯುಕ್ತ ಕೆ.ಯು.ರಂಜಿತ್, ಬುಲ್ ಬುಲ್ ವಿಭಾಗದ ಮುಖ್ಯಸ್ಥೆ ಡೈಸಿ, ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್, ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲರಾದ ಕೆ.ವಿ. ಶಶಿಕಲಾ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ. ಎನ್.ಪಿ. ಕಾವೇರಿ, ಬಿಆರ್‌ಪಿ ಐ.ಜೆ. ಜನೆಟ್, ಶಿಕ್ಷಕರು, ಮಾಲಿನ್ಯ ನಿಯಂತ್ರಣ ಮಂಡಳಿಯ ಸಿಬ್ಬಂದಿ, ನಗರದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕೆ.ಯು. ರಂಜಿತ್ ಕಾರ್ಯಕ್ರಮ ನಿರ್ವಹಿಸಿದರು, ಪ್ರೌಢಶಾಲಾ ವಿದ್ಯಾರ್ಥಿಗಳು ಗೀತೆ ಹಾಡಿದರು.