ಮಡಿಕೇರಿ, ನ. ೪: ರಾಜ್ಯ ಕಾಂಗ್ರೆಸ್ ಸರ್ಕಾರ ವಕ್ಫ್ ಕಾಯಿದೆಯನ್ನು ದುರ್ಬಳಕೆ ಮಾಡಿಕೊಂಡು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಕಾಯಿದೆ ಹೆಸರಿನಲ್ಲಿ ಸರ್ಕಾರವು ಒಂದು ವರ್ಗವನ್ನು ಪ್ರಚೋದಿಸುವ ಕೆಲಸ ಮಾಡುತ್ತಿದೆ. ಆ ಮೂಲಕ ರಾಜ್ಯದ ರೈತರ, ಹಿಂದುಳಿದವರ, ಪರಿಶಿಷ್ಟ ವರ್ಗದವರ ಹಾಗೂ ದೇವಾಲಯಗಳ ಜಾಗವನ್ನು ಕಬಳಿಸುವ ಯತ್ನವನ್ನು ತೆರೆಮರೆಯಲ್ಲಿ ನಡೆಸುತ್ತಿದೆ. ಕೊಡಗು ಜಿಲ್ಲೆಯಲ್ಲಿಯೂ ರೈತರ ಕೃಷಿ ಜಮೀನು, ಮಠ-ಮಂದಿರಗಳ ಆಸ್ತಿಗಳನ್ನು ವಕ್ಫ್ ಬೋರ್ಡ್ ಅಧೀನಕ್ಕೆ ಒಳಪಡಿಸುವ ನಿಟ್ಟಿನಲ್ಲಿ ಈಗಾಗಲೇ ಹಲವರಿಗೆ ವಕ್ಫ್ ಬೋರ್ಡ್ನಿಂದ ನೋಟಿಸ್ ಜಾರಿ ಮಾಡಲಾಗಿದ್ದು, ಯಾವುದೇ ಕಾರಣಕ್ಕೂ ಸರ್ಕಾರದ ಈ ನೀತಿಗೆ ನಾವುಗಳು ಒಪ್ಪುವುದಿಲ್ಲ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ರಾಜ್ಯ ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದ್ದು, ತೆರಿಗೆ ಹಾಗೂ ಗೃಹೋಪಯೋಗಿ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ರಾಜ್ಯದ ಜನರನ್ನು ಸಂಕಷ್ಟಕ್ಕೆ ದೂಡಿದೆ. ಮುಖ್ಯಮಂತ್ರಿಗಳು ಸೇರಿದಂತೆ ಸರ್ಕಾರ ಹಲವಾರು ಹಗರಣಗಳಲ್ಲಿ ಭಾಗಿಯಾಗಿದೆ. ಇದೀಗ ವಕ್ಫ್ ಮಂಡಳಿ ಮೂಲಕ ರೈತರ ಜಮೀನುಗಳನ್ನು ಕಬಳಿಸಲು ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿಲುವನ್ನು ಬದಲಾಯಿಸಿಕೊಳ್ಳಬೇಕೆಂದು ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ಚುನಾವಣಾ ಉಸ್ತುವಾರಿ ಸುಲೋಚನಾ ಭಟ್ ಮಾತನಾಡಿ, ಅನ್ನದಾತರ ಬದುಕನ್ನು ಬರಡಾಗಿಸುವ ರಾಜ್ಯ ಸರ್ಕಾರದ ನೀತಿಯ ವಿರುದ್ಧ ಬಿಜೆಪಿ ಹೋರಾಟ ಹಮ್ಮಿಕೊಂಡಿದೆ. ವಕ್ಫ್ ಬೋರ್ಡ್ ಮುಖಾಂತರ ರಾಜ್ಯದ ಹಲವೆಡೆ ರೈತರ ಜಮೀನುಗಳನ್ನು ಕಬಳಿಸುವ ಯತ್ನ ನಡೆಯುತ್ತಿದೆ. ಇದು ಸರಿಯಲ್ಲ. ವಕ್ಫ್ ನಿಯಮ ತಿದ್ದುಪಡಿಯಾಗಬೇಕು. ನಮ್ಮ ಜಾಗವನ್ನು ನಮಗೆ ಬಿಟ್ಟುಕೊಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರನ್ನು ಮೆಚ್ಚಿಸುವ ಕಾರ್ಯ ನಡೆಯುತ್ತಿದ್ದು, ರಾಜ್ಯದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಲು

(ಮೊದಲ ಪುಟದಿಂದ) ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆಪಾದಿಸಿದರು. ವಕ್ಫ್ ಮಂಡಳಿ ಮೂಲಕ ರೈತರ ಜಮೀನನ್ನು ಕಬಳಿಸಿ ರೈತರನ್ನು ಬೀದಿಪಾಲು ಮಾಡುವ ಪ್ರಯತ್ನ ನಡೆಯುತ್ತಿದ್ದು, ಇದು ಖಂಡನೀಯ ಎಂದು ನುಡಿದರು. ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆಯ ಮೂಲಕ ತೆರಳಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅವರಿಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರ ದೇಶದ ಜನತೆಯ ಹಿತದೃಷ್ಟಿಯಿಂದ ಹಾಗೂ ವಕ್ಫ್ ಮಂಡಳಿಯಲ್ಲಿ ಆಗುತ್ತಿದ್ದ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ವಕ್ಫ್ ಕಾಯ್ದಿಗೆ ತಿದ್ದುಪಡಿ ತರುವ ವಿಧೇಯಕವನ್ನು ಮಂಡಿಸಿದೆ. ಇದು ಜಂಟಿ ಪಾರ್ಲಿಮೆಂಟರಿ ಬೋರ್ಡ್ನ ಪರಿಶೀಲನೆಯಲ್ಲಿದೆ. ಈ ತಿದ್ದುಪಡಿ ಜಾರಿಯಾಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ವಕ್ಫ್ ಬೋರ್ಡ್ ದೇಶದಲ್ಲಿ ಸಾರ್ವಜನಿಕರ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಕೈ ಹಾಕಿದೆ. ಕಾಂಗ್ರೆಸ್ ಸರಕಾರ ಹಾಗೂ ಸಚಿವ ಜಮೀರ್ ಅಹಮದ್ ಅವರು ಇದಕ್ಕೆ ಕುಮ್ಮಕ್ಕು ನೀಡುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂಬುದಾಗಿ ನಮೂದು ಮಾಡದಂತೆ ತಾತ್ಕಾಲಿಕವಾಗಿ ತಡೆ ಹಿಡಿದಿರುವುದು ಕೇವಲ ಚುನಾವಣೆಯ ತಂತ್ರಗಾರಿಕೆಯಾಗಿದೆ. ಬಿಜೆಪಿಯು ಈ ತಂತ್ರಗಾರಿಕೆಯನ್ನು ಒಪ್ಪುವುದಿಲ್ಲ. ಸಚಿವ ಜಮೀರ್ ಅಹಮ್ಮದ್ ಅವರನ್ನು ಸಚಿವ ಸ್ಥಾನದಿಂದ ಕೂಡಲೇ ಉಚ್ಛಾಟಿಸಬೇಕು. ಸಿದ್ದರಾಮಯ್ಯ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು ಹಾಗೂ ಸ್ಪಷ್ಟನೆ ನೀಡಬೇಕು. ಇನ್ನು ಮುಂದೆ ಯಾವುದೇ ವಕ್ಫ್ ಅದಾಲತ್ ನಡೆಸದಂತೆ ಸರ್ಕಾರಿ ಆದೇಶವನ್ನು ಹೊರಡಿಸಬೇಕು ಹಾಗೂ ಇದಕ್ಕೆ ಸಂಬAಧಿಸಿದ ಗೆಜೆಟ್ ನೋಟಿಫಿಕೇಶನ್ ಅನ್ನು ಹಿಂಪಡೆಯಬೇಕು. ಕೇಂದ್ರ ಸರ್ಕಾರವು ತರುತ್ತಿರುವ ವಕ್ಫ್ ತಿದ್ದುಪಡಿ ಕಾಯ್ದೆಗೆ ರಾಜ್ಯ ಸರ್ಕಾರವು ಮುಂದಿನ ಅಧಿವೇಶನದಲ್ಲಿ ಒಮ್ಮತದಿಂದ ನಿರ್ಣಯವನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಬೇಕು ಎಂದು ಒತ್ತಾಯಿಸಲಾಗಿದೆ.

ಪ್ರತಿಭಟನೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್, ಮಹೇಶ್ ಜೈನಿ, ವಕ್ತಾರರಾದ ಬಿ.ಕೆ. ಅರುಣ್ ಕುಮಾರ್, ತಳೂರು ಕಿಶೋರ್ ಕುಮಾರ್, ಬಿಜೆಪಿ ಮಾಜಿ ಅಧ್ಯಕ್ಷರುಗಳಾದ ಭಾರತೀಶ್, ಮನು ಮುತ್ತಪ್ಪ, ರಾಬಿನ್ ದೇವಯ್ಯ, ಜಿ.ಪಂ. ಮಾಜಿ ಅಧ್ಯಕ್ಷ ರವಿ ಕುಶಾಲಪ್ಪ್ಪ, ಬಿಜೆಪಿ ಖಜಾಂಚಿ ಕನ್ನಂಡ ಸಂಪತ್, ನಗರ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್, ಮಾಜಿ ಅಧ್ಯಕ್ಷ ಮನು ಮಂಜುನಾಥ್, ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಪಿ.ಎಂ. ರವಿ, ವೀರಾಜಪೇಟೆ ತಾಲೂಕು ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಬಿಜೆಪಿ ನಗರ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಪೂವಯ್ಯ, ನಗರಸಭಾ ಸದಸ್ಯರುಗಳಾದ ಸವಿತಾ ರಾಕೇಶ್, ಕೆ.ಎಸ್. ರಮೇಶ್, ಸಬಿತಾ, ಶ್ವೇತ, ಅರುಣ್ ಶೆಟ್ಟಿ, ಶಾರದಾ ನಾಗರಾಜ್, ಎಸ್.ಸಿ. ಸತೀಶ್, ಅಪ್ಪಣ್ಣ, ಮಂಜುಳಾ ಸೇರಿದಂತೆ ಮತ್ತಿತರ ಪ್ರಮುಖರು ಹಾಜರಿದ್ದರು.