ಗೋಣಿಕೊಪ್ಪಲು, ನ. ೭: ಪೊನ್ನಂಪೇಟೆ ತಾಲೂಕಿಗೆ ಆಗಮಿಸುತ್ತಿರುವ ಕನ್ನಡ ಜ್ಯೋತಿ ರಥವನ್ನು ನಾವು ವಿಜೃಂಭಣೆಯಿAದ ಸ್ವಾಗತಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿ ಗೌರವಿಸಿ ಬೀಳ್ಕೊಡಬೇಕಾಗಿದೆ ಎಂದು ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಮತ್ತು ತಾಲೂಕು ದಂಡಾಧಿಕಾರಿ ಕೆ.ಎನ್. ಮೋಹನ್‌ಕುಮಾರ್ ನುಡಿದರು. ಅವರು ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ ೨೦, ೨೧, ೨೨ ರಂದು ನಡೆಯಲಿದ್ದು, ಸಮ್ಮೇಳನದ ಪ್ರಚಾರಕ್ಕಾಗಿ ಆಗಮಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ರಥವನ್ನು ಸ್ವಾಗತಿಸುವ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಸಭೆಯಲ್ಲಿ ಉಪಸ್ತಿತರಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಮಾತನಾಡಿ, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಭುವನಗಿರಿಯಲ್ಲಿರುವ ಭುವನೇಶ್ವರಿ ದೇವಾಲಯದಿಂದ ಹೊರಟ ಕನ್ನಡ ಜ್ಯೋತಿ ಹೊತ್ತ ರಥವು ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಸಾಹಿತ್ಯ ಸಮ್ಮೇಳನದ ಕುರಿತು ಜನರಿಗೆ ಮಾಹಿತಿ ನೀಡುವ ಕಾರ್ಯ ಮಾಡುತ್ತಿದೆ. ಈ ರಥವು ಡಿಸೆಂಬರ್ ೧೦ ಮತ್ತು ೧೧ ರಂದು ಕೊಡಗು ಜಿಲ್ಲೆಯಲ್ಲಿ ಸಂಚರಿಸಲಿದ್ದು, ಸಂಪಾಜೆ ಗಡಿ ಮೂಲಕ ಜಿಲ್ಲೆಯನ್ನು ಪ್ರವೇಶಿಸುವ ರಥವು ಮಡಿಕೇರಿ, ವೀರಾಜಪೇಟೆ ಮಾರ್ಗವಾಗಿ ಪೊನ್ನಂಪೇಟೆ ತಾಲೂಕಿಗೆ ಬರಲಿದೆ. ಗೋಣಿಕೊಪ್ಪಲಿನಲ್ಲಿ ಮತ್ತು ಪೊನ್ನಂಪೇಟೆಯಲ್ಲಿ ಅದನ್ನು ಕಳಸ ಹೊತ್ತ ಮಹಿಳೆಯರಿಂದ ಶಾಸ್ತ್ರೋಕ್ತವಾಗಿ ಸ್ವಾಗತಿಸಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಬೇಕಿದೆ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಆಗಿರುವ ಕುಲ್ಲಚಂಡ ಪ್ರಮೋದ್ ಗಣಪತಿಯವರು ವೀರಾಜಪೇಟೆಯಿಂದ ಗೋಣಿಕೊಪ್ಪಲು ಮಾರ್ಗವಾಗಿ ಪೊನ್ನಂಪೇಟೆಗೆ ಬರುತ್ತಿರುವ ರಥವನ್ನು ಗೋಣಿಕೊಪ್ಪಲಿನ ಶ್ರೀ ಉಮಾಮಹೇಶ್ವರಿ ದೇವಾಲಯದ ಬಳಿ ಸ್ವಾಗತಿಸಿ ಬಸ್ ನಿಲ್ದಾಣದಲ್ಲಿ ರಥಯಾತ್ರೆಯ ವಿಚಾರವನ್ನು ಜನರಿಗೆ ಮನದಟ್ಟು ಮಾಡುವ ಮತ್ತು ಕನ್ನಡ ಗೀತ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದರು. ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ, ಪೊನ್ನಂಪೇಟೆಯ ತಹಶೀಲ್ದಾರ್ ಕಚೇರಿಯ ಬಳಿ ರಥವನ್ನು ಸ್ವಾಗತಿಸಿ ಬಸ್ ನಿಲ್ದಾಣದಲ್ಲಿ ಗೀತ ಗಾಯನ ಕಾರ್ಯಕ್ರಮ ನಡೆಸಿ ಶ್ರೀ ರಾಮಕೃಷ್ಣ ಆಶ್ರಮದವರೆಗೂ ಮೆರವಣಿಗೆ ನಡೆಸಲಾಗುವುದು. ನಂತರ ಶ್ರೀ ರಾಮಕೃಷ್ಣ ಆಶ್ರಮದಲ್ಲಿಯೇ ರಥವು ವಾಸ್ತವ್ಯ ಹೂಡಲಿದ್ದು, ಮಾರನೇ ದಿನ ಕುಶಾಲನಗರಕ್ಕೆ ತೆರಳಲಿದೆ ಎಂದರು. ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಸರಕಾರಿ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ವೀರಾಜಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಕೊಣಿಯಂಡ ಅಪ್ಪಣ್ಣ ವಿನಂತಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಪೊನ್ನಂಪೇಟೆ ಪಂಚಾಯಿತಿ ಅಧ್ಯಕ್ಷ ಅಣ್ಣೀರ ಹರೀಶ್ ಮಾತನಾಡಿ, ಪಂಚಾಯಿತಿ ವತಿಯಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ತಿಳಿಸಿದರು.

ಸಭೆಯಲ್ಲಿ ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ, ಕೆ.ವಿ. ರಾಮಕೃಷ್ಣ, ನಿರ್ದೇಶಕರುಗಳಾದ ಟಿ.ಆರ್. ವಿನೋದ್, ಎಸ್.ಡಿ. ಗಿರೀಶ್. ಪೊನ್ನಂಪೇಟೆ ಹೋಬಳಿ ಕಂದಾಯ ಅಧಿಕಾರಿ ಸುಧೀಂದ್ರ, ಪೊಲೀಸ್ ಅಧಿಕಾರಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಉಪಸ್ಥಿತರಿದ್ದರು.