ಮಡಿಕೇರಿ, ನ. ೧೫: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಸಿ ನೆಡುವ ಕಾರ್ಯಕ್ರಮ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ನಡೆಯಿತು.
ಈ ಸಾಲಿನ ನೂತನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಬೊಳ್ಳಜಿರ ಬಿ. ಅಯ್ಯಪ್ಪ ನೇತೃತ್ವದಲ್ಲಿ ಕಾಲೇಜಿನಲ್ಲಿ ವಿನೂತನ ಕಾರ್ಯಕ್ರಮ ಆಯೋಜಿಸುವ ಉದ್ದೇಶದಿಂದ ಹಳೆ ವಿದ್ಯಾರ್ಥಿ ಸಂಘದ ನೂತನ ಆಡಳಿತ ಮಂಡಳಿ ವತಿಯಿಂದ ಮೊದಲ ಕಾರ್ಯಕ್ರಮ ಆಯೋಜಿಸಿದ್ದು, ಕಾರ್ಯಕ್ರಮವನ್ನು ಕಾಲೇಜು ಪ್ರಾಂಶುಪಾಲ ಮೇಜರ್ ಫ್ರೊ. ಬಿ. ರಾಘವ ಅವರು ಗಿಡ ನೆಡುವ ಮೂಲಕ ಉದ್ಘಾಟಿಸಿದರು.
ಕಾಲೇಜು ಮುಂಭಾಗದ ಉದ್ಯಾನವನದಲ್ಲಿ ಬಟರ್ ಫ್ರೂಟ್, ಕಿತ್ತಳೆ ಸೇರಿದಂತೆ ಕೊಡಗಿನಲ್ಲಿ ಅಳಿವಿನಂಚಿನಲ್ಲಿರುವ ಕಾಡುಜಾತಿಯ ಹಣ್ಣುಗಳ ಗಿಡ ನೆಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ಮೇಜರ್ ಫ್ರೊ. ರಾಘವ ಅವರು, ಹಳೆ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯಾದ ಮೇಲೆ ನಡೆಯುತ್ತಿರುವ ಮೊದಲ ಕಾರ್ಯಕ್ರಮ ಇದಾಗಿದ್ದು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. ಈ ಒಂದು ನೂತನ ಆಡಳಿತ ಮಂಡಳಿ ಬಹಳ ಉತ್ಸಾಹದಿಂದ ಮುಂದಿನ ದಿನಗಳಲ್ಲೂ ಕಾಲೇಜಿನ ಅಭಿವೃದ್ಧಿಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಕಾಲೇಜಿನ ಹಳೆ ವಿದ್ಯಾರ್ಥಿ ಕೋಳಿಮಾಡು ಪ್ರಶಾಂತ್ ಮುತ್ತಣ್ಣ ಮಾತನಾಡಿ, ಕೊಡಗಿನಲ್ಲಿ ಕಾಡುಜಾತಿಯ ಹಣ್ಣುಗಳು ಕಡಿಮೆಯಾಗಿದ್ದು, ಅಳಿವಿನಂಚಿಗೆ ತಲುಪುತ್ತಿದೆ. ಹೀಗಾಗಿ ಕೊಡಗಿನ ಕಾಡು ಜಾತಿಯ ಹಣ್ಣಿನ ಗಿಡಗಳನ್ನ ನೆಟ್ಟು ಪೋಷಿಸುವ ಮೂಲಕ ಮುಂದಿನ ಪೀಳಿಗೆಗೆ ನಾವು ಹಣ್ಣಿನ ಗಿಡಗಳು ಉಳಿಯುವಂತೆ ಮಾಡಬೇಕು ಎಂದು ಕರೆ ನೀಡಿದರು.
ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಾಗೂ ಕೊಡಗು ಪ್ರೆಸ್ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಮಾತನಾಡಿ, ನಮ್ಮ ನೂತನ ಸಮಿತಿ ಅವರು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಕೆಲಸ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಬೊಟ್ಟಂಗಡ ಗಣಪತಿ, ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು, ಹಳೆ ವಿದ್ಯಾರ್ಥಿ ಸಂಘದ ನಿರ್ದೇಶಕರುಗಳಾದ ಮಾಗುಲು ಲೋಹಿತ್, ಚರಣ್ ಬಲ್ಯದ, ರಶ್ಮಿ ಮೇದಪ್ಪ, ಪೇರಿಯಂಡ ಯಶೋಧ, ಖುರ್ಷಿದಾ ಬಾನು ಹಾಗೂ ಕಾಲೇಜು ಪ್ರಾಧ್ಯಾಪಕರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.