ಮಡಿಕೇರಿ, ನ. ೧೬: ಕೊಡಗು ಜಿಲ್ಲೆಯ ವಿವಿಧೆಡೆ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವರಾದ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬAಧಿಸಿದAತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿದರು. ಜಿಲ್ಲೆಯಲ್ಲಿ ವಿವಿಧ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ ೨೦೮ ಕೋಟಿ ರೂ. ವಿನಿಯೋಗ ಮಾಡಲಾಗುತ್ತದೆ ಎಂದರು.
ಸೋಮವಾರಪೇಟೆ, ಮಾದಾಪುರ, ಮೂರ್ನಾಡು, ಹುದಿಕೇರಿ, ಬಾಳೆಲೆ, ಸಿದ್ದಾಪುರ, ಕೂಡಿಗೆ, ಕೋಪಟ್ಟಿ, ಸಂಪಾಜೆ, ಕೊಡ್ಲಿಪೇಟೆ, ಕಾಟಕೇರಿ, ಕಳತ್ಮಾಡು, ಮರುಗೋಡು ಕೇಂದ್ರಗಳಲ್ಲಿ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆ ಆಗಲಿದೆ.
ಜಿಲ್ಲೆಯ ಹಾಡಿಗಳು ಸೇರಿದಂತೆ ಎಲ್ಲಾ ಕುಗ್ರಾಮಗಳಿಗೂ ಸಹ ವಿದ್ಯುತ್ ಸಂಪರ್ಕ ಕಲ್ಪಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಸೆಸ್ಕ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯ ನಿರ್ವಹಿಸುವಂತೆ ಸಚಿವರು ಸೂಚಿಸಿದರು.
ಸರ್ಕಾರ ರಾಜ್ಯದ ವಿವಿಧ ಕಡೆಗಳಲ್ಲಿ ೬ ಲಕ್ಷಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕಗಳನ್ನು ಸ್ಥಾಪಿಸಲು ಮುಂದಾಗಿದೆ. ವಿದ್ಯುತ್ ಉಪ ಕೇಂದ್ರಗಳು ಎಲ್ಲೆಲ್ಲಿ ಅಗತ್ಯವಿದೆ. ಅಂತಹ ಕಡೆಗಳಲ್ಲಿ ವಿದ್ಯುತ್ ಉಪ ಕೇಂದ್ರ ನಿರ್ಮಾಣ ಮಾಡಲಾಗುವುದು. ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ಕ್ರಮವಹಿಸಲಾಗುವುದು. ರಾಜ್ಯದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಸೋಲಾರ್ ಬಳಕೆಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ೬೩೬ ಮಂಜೂರಾದ ಹುದ್ದೆಗಳಿದ್ದು, ೨೪೨ ಮಂದಿ ಕಾರ್ಯನಿರ್ವಹಿಸುತಿದ್ದಾರೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
ಗೃಹಜ್ಯೋತಿ ಯೋಜನೆಯು ರಾಜ್ಯಾದ್ಯಂತ ಉತ್ತಮವಾಗಿ ನಡೆಯುತ್ತಿದ್ದು, ಕೊಡಗು ಜಿಲ್ಲೆಗೆ ಸಂಬAಧಿಸಿದAತೆ ೧,೫೬,೦೨೨ ಕುಟುಂಬಗಳು ಹೆಸರು ನೋಂದಣಿ ಮಾಡಿದ್ದು, ಶೇ.೯೯.೫೯ ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಮಾತನಾಡಿ, ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹುದಿಕೇರಿ, ಸಿದ್ದಾಪುರ, ಬಾಳೆಲೆಯಲ್ಲಿ ವಿದ್ಯುತ್ ಉಪ ಕೇಂದ್ರ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಲಾಗಿದ್ದು, ಕಾಮಗಾರಿ ಸದ್ಯದಲ್ಲೇ ಆರಂಭವಾಗಲಿದೆ.
ಸAಪಾಜೆ, ಭಾಗಮಂಡಲ ಭಾಗದಲ್ಲಿಯೂ ಸಹ ವಿದ್ಯುತ್ ಉಪ ಕೇಂದ್ರ ಸ್ಥಾಪಿಸಲಾಗುವುದು ಎಂದರು.
ಈ ಸಂದರ್ಭ ಮಾತನಾಡಿದ ಇಂಧನ ಇಲಾಖೆಯ ಅಧಿಕಾರಿಯೊಬ್ಬರು ಸಂಪಾಜೆ ಮತ್ತು ಭಾಗಮಂಡಲ ವ್ಯಾಪ್ತಿಯಲ್ಲಿ ಅರಣ್ಯವಿರುವುದರಿಂದ ೩೩ ಕೆ.ವಿ. ವಿದ್ಯುತ್ ಉಪ ಕೇಂದ್ರವನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದರು.
ಈ ವೇಳೆ ಮಾತನಾಡಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‌ಗೌಡ ೩೩ ಕೆ.ವಿ.ವಿದ್ಯುತ್ ಉಪ ಕೇಂದ್ರ ನಿರ್ಮಾಣ ಮಾಡುವುದರಿಂದ ಸಮರ್ಪಕವಾಗಿ ವಿದ್ಯುತ್ ಒದಗಿಸಲು ಸಾಧ್ಯವಿಲ್ಲ. ಆದ್ದರಿಂದ ಭವಿಷ್ಯದ ದೃಷ್ಟಿಯಿಂದ ೬೬ ಕೆ.ವಿ. ವಿದ್ಯುತ್ ಉಪಕೇಂದ್ರ ನಿರ್ಮಾಣ ಮಾಡುವುದು ಒಳ್ಳೆಯದು ಎಂದು ಸಲಹೆ ನೀಡಿದರು.
ಈ ಸಂದರ್ಭ ಮಾತನಾಡಿದ ಸೆಸ್ಕ್ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ ಈಗಾಗಲೇ ಇರುವ ಪ್ರಸ್ತಾವನೆಯಂತೆ ೩೩ ಕೆ.ವಿ. ವಿದ್ಯುತ್ ಉಪ ಕೇಂದ್ರವನ್ನು ನಿರ್ಮಿಸಲಿ, ನಂತರ ಮುಂದಿನ ಹಂತದಲ್ಲಿ ೬೬ ಕೆ.ವಿ. ವಿದ್ಯುತ್ ಉಪಕೇಂದ್ರವನ್ನು ನಿರ್ಮಿಸಲು ಪ್ರಯತ್ನಿಸಬಹುದು ಎಂದರು.
ವಿದ್ಯುತ್ ಉಪ ಕೇಂದ್ರ ನಿರ್ಮಾಣಕ್ಕೆ ಅರಣ್ಯ ಇಲಾಖೆಯ ಒಪ್ಪಿಗೆ ಪಡೆಯುವುದು. ಹಾಗೆಯೇ ಹಾಡಿಗಳು ಸೇರಿದಂತೆ ಕುಗ್ರಾಮಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಂದಾಗುವುದಾಗಿ ರಮೇಶ್ ಬಂಡಿ ಸಿದ್ದೇಗೌಡ ಹೇಳಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಪ್ರಸಕ್ತ ವರ್ಷದ ಮಳೆಗಾಲದ ಸಂದರ್ಭದಲ್ಲಿ ಸೆಸ್ಕ್ ಇಲಾಖೆಯಿಂದ ಉತ್ತಮವಾಗಿ ಕೆಲಸ ನಿರ್ವಹಣೆಯಾಗಿದೆ ಎಂದು ತಿಳಿಸಿದರು.
ಮಳೆಗಾಲದ ಸಂದರ್ಭದಲ್ಲಿ ಹಾನಿಯಾದ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕಗಳನ್ನು ಬದಲಿಸಿ, ನಿರಂತರ ವಿದ್ಯುತ್ ಪೂರೈಕೆಗೆ ಶ್ರಮಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಪ್ರಸಕ್ತ ವರ್ಷದಲ್ಲಿ ೪೦ಕ್ಕೂ ಹೆಚ್ಚು ಲೈನ್‌ಮೆನ್‌ಗಳು ಕರ್ತವ್ಯ ನಿರ್ವಹಿಸಿದ ಪರಿಣಾಮ ಉತ್ತಮ ಕಾರ್ಯನಿರ್ವಹಣೆ ಆಗಿದೆ ಎಂದರು.
ಪ್ರಸಕ್ತ ವರ್ಷದಲ್ಲಿ ಹೆಚ್ಚಿನ ಮಳೆಯಿಂದಾಗಿ ೩,೪೭೨ ಕಂಬಗಳಿಗೆ ಹಾನಿಯಾಗಿದ್ದು, ೧೨.೪೨ ಎಚ್.ಟಿ ಲೈನ್, ೧೧.೧೨ ಎಲ್‌ಟಿ ಲೈನ್ ಹಾಗೂ ೭೭ ವಿದ್ಯುತ್ ಪರಿವರ್ತಕಗಳಿಗೆ ಹಾನಿಯಾಗಿದ್ದು, ಒಟ್ಟು ೫೫೦.೩೨ ಲಕ್ಷದಷ್ಟು ಹಾನಿಯಾಗಿದೆ ಎಂದು ತಿಳಿಸಿದರು.
ಪ್ರಸಕ್ತ ವರ್ಷದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ೧೯ ಮತ್ತು ಕುಡಿಯುವ ನೀರು ಪೂರೈಕೆ ಯೋಜನೆಯಡಿ ೭೬ ಕಾಮಗಾರಿಗಳಿಗೆ ವಿದ್ಯುತ್ ಸಂಪರ್ಕಿಸಲಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಶೀಲ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷÀ ತೀತಿರ ಧರ್ಮಜ ಉತ್ತಪ್ಪ, ಇಂಧನ ಇಲಾಖೆಯ ಅಧಿಕಾರಿಗಳು, ಇತರರು ಇದ್ದರು.