ಕೂಡಿಗೆ, ಡಿ. ೫: ವಿದ್ಯಾರ್ಥಿಗಳು ಕಲಿಕಾ ಹಂತದಲ್ಲಿಯೆ ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಂಡು ಅಧ್ಯಯನ ದೊಂದಿಗೆ ಬರವಣಿಗೆ ಕೌಶಲ್ಯ ಬೆಳೆಸಿಕೊಳ್ಳಬೇಕು ಎಂದು ಸಾಹಿತಿ ಭಾರದ್ವಾಜ ಕೆ. ಆನಂದತೀರ್ಥ ಹೇಳಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕ.ಸಾ.ಪ. ಹೆಬ್ಬಾಲೆ ಘಟಕದ ವತಿಯಿಂದ ತೊರೆನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಭಾಷಾ ಸಂಘದ ಸಹಯೋಗದೊಂದಿಗೆ ೬೯ ನೇ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಸಂಪಾಜೆ ದಿ.ಸಣ್ಣಯ್ಯ ಪಟೇಲ್ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು ಭಾಷೆ ಬೆಳವಣಿಗೆಗೆ ಇಂತಹ ಕಾರ್ಯಕ್ರಮಗಳು ಸಹಕಾರಿ ಎಂದರು.
ವಿದ್ಯಾರ್ಥಿಗಳು ಹಿಂಜರಿಕೆ ಮನೋಭಾವ ಬಿಟ್ಟು ತಮ್ಮನ್ನು ಅಧ್ಯಯನ ಮತ್ತು ಬರವಣಿಗೆಯಲ್ಲಿ ತೊಡಗಿಸಿಕೊಂಡಲ್ಲಿ ಸಾಹಿತ್ಯದಲ್ಲಿ ಉತ್ತಮ ರೀತಿಯಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಭಾರದ್ವಾಜ್ ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕ.ಸಾ.ಪ. ಸಮಿತಿಯ ಸದಸ್ಯ ಎಂ.ಎನ್. ವೆಂಕಟನಾಯಕ್, ಇಂತಹ ಕಾಲಘಟ್ಟದಲ್ಲಿ ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿ ಹೆಚ್ಚಿಸುವ ಅಗತ್ಯವಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ತೊರೆನೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಬಿ.ಆರ್. ಸತ್ಯನಾರಾಯಣ ಮಾತನಾಡಿ, ಇಂತಹ ಸಾಹಿತ್ಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಹೊರ ಹೊಮ್ಮಿಸಲು ಸಹಕಾರಿಯಾಗಿವೆ ಎಂದರು.
ತಾಲೂಕು ಕ.ಸಾ.ಪ. ಅಧ್ಯಕ್ಷ ಕೆ.ಎಸ್. ನಾಗೇಶ್ ಮಾತನಾಡಿ, ಮಾತೃಭಾಷೆ ಕುರಿತು ಅಭಿಮಾನ ಬೆಳೆಸಿಕೊಳ್ಳಬೇಕು. ಇತರೆ ಭಾಷೆಗಳ ಬಗ್ಗೆ ಕೀಳರಿಮೆ ಇರಬಾರದು ಎಂದರು. ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್, ಕ.ಸಾ.ಪ. ಹೆಬ್ಬಾಲೆ ಘಟಕದ ಅಧ್ಯಕ್ಷ ಎಂ.ಎನ್. ಮೂರ್ತಿ ಮಾತನಾಡಿದರು. ತಾಲೂಕು ಕ.ಸಾ.ಪ. ಪದಾಧಿಕಾರಿ ಗಳಾದ ಎಂ.ಎನ್. ಕಾಳಪ್ಪ, ಟಿ.ಬಿ. ಮಂಜುನಾಥ್, ಕೋಶಾಧಿಕಾರಿ ಕೆ.ವಿ. ಉಮೇಶ್, ಕ.ಸಾ.ಪ. ಹೆಬ್ಬಾಲೆ ಘಟಕದ ಕಾರ್ಯದರ್ಶಿ ಹೆಚ್.ಎನ್. ಸುಬ್ರಮಣ್ಯ, ಸಹ ಕಾರ್ಯದರ್ಶಿ ಡಿ. ಕವಿತ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಭಾಗ್ಯಲಕ್ಷಿö್ಮ, ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ಶಿಕ್ಷಕರು ಇದ್ದರು. ಶಿಕ್ಷಕಿ ಕವಿತ ನಿರೂಪಿಸಿದರು.
ಇದೇ ವೇಳೆ ಕ.ಸಾ.ಪ. ಹೆಬ್ಬಾಲೆ ಘಟಕದ ವತಿಯಿಂದ ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಗೀತ ಗಾಯನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.