ಕುಶಾಲನಗರ, ಡಿ. ೫: ನಾಡು, ನುಡಿ, ಜಲ, ಭಾಷೆ ವಿಚಾರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಳೆದ ಎರಡು ದಶಕಗಳಿಂದ ನಿರಂತರ ಹೋರಾಟ ನಡೆಸುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ತಿಳಿಸಿದ್ದಾರೆ.
ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಘಟಕದ ಆಶ್ರಯದಲ್ಲಿ ಕುಶಾಲನಗರ ಕಲಾಭವನದಲ್ಲಿ ನಡೆದ ರಾಜ್ಯೋತ್ಸವ ಹಾಗೂ ಕೊಡಗು ಜಿಲ್ಲಾ ಮಟ್ಟದ ನೃತ್ಯೋತ್ಸವ ಸ್ಪರ್ಧಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕನ್ನಡಿಗರ ಪ್ರಗತಿಗಾಗಿ ನಾಡಿನ ಉದ್ದಗಲಕ್ಕೂ ಹೋರಾಟ ನಡೆಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ಗಡಿಭಾಗದ ಸ್ಥಿತಿಗತಿ ಬಗ್ಗೆ ಕಟ್ಟೆಚ್ಚರ ವಹಿಸಿ ಹೋರಾಟ ಮಾಡಲಾಗುತ್ತಿದೆ. ಸಮೃದ್ಧ, ಅಖಂಡ ಕರ್ನಾಟಕಕ್ಕೆ ಪ್ರತಿಯೊಬ್ಬರು ಪಣತೊಡಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಕೊಡ್ಲಿಪೇಟೆ ಕಿರಿ ಕೊಡ್ಲಿ, ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ, ಭಾಷೆ ಅಥವಾ ನಾಡಿನ ಬಗ್ಗೆ ನಿರಭಿಮಾನ, ಉದಾಸೀನತೆ ಸಲ್ಲದು ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ವೇದಿಕೆಯ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಗೌಡ, ಶ್ವೇತ ಗೌಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ, ಜೆಎಸಿ ಚೇರ್ಮನ್ ಎಂ.ಡಿ. ರಂಗಸ್ವಾಮಿ ಮಾತನಾಡಿದರು. ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಕೊಡಗು ಜಿಲ್ಲೆಯ ಸಂಘಟನೆ ಮತ್ತು ಸಮಸ್ಯೆಗಳ ಬಗ್ಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ಸಹಾಯಕ ಆರಕ್ಷಕ ಉಪ ನಿರೀಕ್ಷಕಿ ಕುಮಾರಿ ದೀಪಕ್, ವೈದ್ಯಾಧಿ ಕಾರಿ ಡಾ. ಮಧು ಸೂದನ್, ಕುಶಾಲನಗರ ಪುರಸಭೆ ಮುಖ್ಯ ಅಧಿಕಾರಿ ಕೃಷ್ಣ ಪ್ರಸಾದ್, ಪತ್ರಕರ್ತೆ ವನಿತಾ ಚಂದ್ರಮೋಹನ್, ನಿವೃತ್ತ ಚಾಲಕರಾದ ಧನರಾಜ್ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಪುಟ್ಟೇಗೌಡ ವೀರಭದ್ರಪ್ಪ, ಸಂಗೀತ ಚಂದನ್ ಕುಮಾರ್, ಗಾಯತ್ರಿ ವಿಜಯೇಂದ್ರ, ರಾಜ್ಯ ಮಹಿಳಾ ಸಂಚಾಲಕಿ ದೀಪಾ ಪೂಜಾರಿ, ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಬಿ.ಎ. ನಾಗೇಗೌಡ, ಸಾಹಿತಿ ಫ್ಯಾನ್ಸಿ ಮುತ್ತಣ್ಣ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನಾಧಿಕಾರಿ ರೋಹಿತ್, ವೇದಿಕೆಯ ಜಿಲ್ಲಾ ಮಹಿಳಾ ಅಧ್ಯಕ್ಷೆ ಸಂಧ್ಯಾ ಗಣೇಶ್, ಉದ್ಯಮಿ ಸಿ.ಜೆ. ಅನಿಲ್, ಕುಶಾಲನಗರ ತಾಲೂಕು ಅಧ್ಯಕ್ಷ ಬಿ.ಜೆ. ಅಣ್ಣಯ್ಯ, ತಾಲೂಕು ಮಹಿಳಾ ಅಧ್ಯಕ್ಷೆ ಹಾನಗಲ್ ರೂಪಾ ಗಣೇಶ್, ಮೈಸೂರು ಮಂಡ್ಯ ಹಾಸನ, ಬೆಂಗಳೂರು ಮತ್ತಿತರ ಜಿಲ್ಲೆಗಳ ಅಧ್ಯಕ್ಷರು, ಕೊಡಗು ಜಿಲ್ಲೆಯ ವಿವಿಧ ಘಟಕಗಳ ಪದಾಧಿಕಾರಿಗಳು ಇದ್ದರು.