ಮಡಿಕೇರಿ, ಜ. ೨೨: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿಯನ್ನು ಮಂಗಳವಾರ ಆಚರಿಸಲಾಯಿತು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ೧೨ನೇ ಶತಮಾನದಲ್ಲಿ ಬಸವಣ್ಣ ಅವರು ಸೇರಿದಂತೆ ಎಲ್ಲಾ ವಚನಕಾರರ ಬಗ್ಗೆ ಮಾಹಿತಿ ತಿಳಿದುಕೊಳ್ಳುವಂತಾಗಬೇಕು. ಅಂಬಿಗರ ಚೌಡಯ್ಯ ಅವರು ಸಮಾಜಕ್ಕೆ ನೀಡಿರುವ ಸುಧಾರಣೆ ಮತ್ತು ಸಂದೇಶಗಳ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳಬೇಕೆಂದರು.

ಗಾಳಿಬೀಡು ನವೋದಯ ವಸತಿ ಶಾಲೆಯ ಉಪನ್ಯಾಸಕರಾದ ಮಾರುತಿ ದಾಸಣ್ಣವರ್ ಮಾತನಾಡಿ, ಜಗತ್ತಿನಲ್ಲಿ ಮೊದಲ ಬಾರಿಗೆ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶರಣರ ಕೊಡುಗೆ ಅಪಾರ. ಸಮಾಜದಲ್ಲಿನ ಮೌಢ್ಯಗಳನ್ನು ಹೋಗಲಾಡಿಸಿ ಸಮಾನತೆಯ ಆಂದೋಲನವನ್ನೇ ಹುಟ್ಟು ಹಾಕಿದ ನಿಜ ಚಳುವಳಿ ಎಂದರೆ ಅದು ವಚನ ಚಳುವಳಿ ಎಂದು ವರ್ಣಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳ ಮಾತನಾಡಿ, ಅಂಬಿಗರ ಚೌಡಯ್ಯ ಅವರು ವಚನಗಳ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ ಎಂದು ಹೇಳಿದರು.

ತಹಶೀಲ್ದಾರ್ ಪ್ರವೀಣ್ ಕುಮಾರ್, ಬ್ಲಾಸಂ ಶಾಲೆಯ ಮುಖ್ಯೋಪಾಧ್ಯಾಯಿನಿ ಅನಸೂಯ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ, ಬಿಸಿಎಂ ಇಲಾಖೆಯ ತಾಲೂಕು ಅಧಿಕಾರಿ ಮೋಹನ್ ಕುಮಾರ್, ಶಿಕ್ಷಕರಾದ ಮಂಗಳಗೌರಿ, ಶುಭ, ಮಣಜೂರು ಮಂಜುನಾಥ್ ಇತರರು ಇದ್ದರು.