ಸಿದ್ದಾಪುರ, ಫೆ. ೧೦: ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಫೆ೨೦ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಮನೆಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮ ಪಂಚಾಯಿತಿ ನೌಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ. ರಾಮಕೃಷ್ಣ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಕುರಿತು ಮಾಹಿತಿ ನೀಡಿದ ಅವರು ಕಳೆದ ವರ್ಷ ಜುಲೈ ತಿಂಗಳಲ್ಲಿ ಸಂಘಟನೆಯ ವತಿಯಿಂದ ಬೆಂಗಳೂರಿನಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ೧೯ ಬೇಡಿಕೆಗಳನ್ನು ಈಡೇರಿಸುವಂತೆ ಪಂಚಾಯತ್ ರಾಜ್ ಸಚಿವರಿಗೆ ಮನವಿ ಪತ್ರವನ್ನು ಸಲ್ಲಿಸಲಾಗಿತ್ತು. ಆದರೆ ಸರಕಾರವು ಈವರೆಗೂ ಸ್ಪಂದಿಸದೆ ಒಂದು ಬೇಡಿಕೆಗಳನ್ನು ಕೂಡ ಈಡೇರಿಸದೆ ನಿರ್ಲಕ್ಷ ವಹಿಸಿರುವುದು ಖಂಡನೀಯ ಎಂದು ರಾಮಕೃಷ್ಣ ಅಕ್ರೋಶ ವ್ಯಕ್ತಪಡಿಸಿದರು.

ಪಂಚಾಯಿತಿ ನೌಕರರ ಸಂಘದ ಕೊಡಗು ಜಿಲ್ಲಾಧ್ಯಕ್ಷರಾದ ಪಿಆರ್ ಭರತ್ ಮಾತನಾಡಿ ಪಂಚಾಯಿತಿ ನೌಕರರ ಸಿಐಟಿಯು ಸಂಘಟನೆಯ ವತಿಯಿಂದ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನೀಡಬೇಕೆಂದು ಹಲವಾರು ಬಾರಿ ಹೋರಾಟಗಳು ಮಾಡಿದ್ದರು ಕೂಡ ಸರಕಾರವು ಎಚ್ಚೆತ್ತುಕೊಳ್ಳದೆ ಸುಳ್ಳು ಆಶ್ವಾಸನೆ ನೀಡಿ ವಂಚಿಸುತ್ತಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನವನ್ನು ನೀಡಬೇಕು ಹಾಗೂ ನಿವೃತ್ತಿ ಪಿಂಚಣಿ ನೀಡಬೇಕೆಂದು ಒತ್ತಾಯಿಸಿ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಕಾಲ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ಹಲವಾರು ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿಗಳ ಕೊರತೆ ಇದ್ದು ಏಕವ್ಯಕ್ತಿಯೇ ಕಚೇರಿಯ ಎಲ್ಲಾ ಕೆಲಸಗಳನ್ನು ಮಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದ್ದು ಈ ಹಿನ್ನೆಲೆಯಲ್ಲಿ ಖಾಲಿ ಇರುವ ಸಿಬ್ಬಂದಿಗಳನ್ನು ಭರ್ತಿ ಮಾಡಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಸಿಬ್ಬಂದಿಗಳನ್ನು ಖಾಯಂ ಗೊಳಿಸಬೇಕೆಂದು ಭರತ್ ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಫೆ೨೦ರಂದು ಮುಖ್ಯಮಂತ್ರಿಗಳ ನಿವಾಸದ ಎದುರು ಪ್ರತಿಭಟನೆ ನಡೆಸುವ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು. ಪತ್ರಿಕಾಗೋಷ್ಠಿಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಸಿಐಟಿಯು ಸಂಘಟನೆಯ ಪದಾಧಿಕಾರಿಗಳಾದ ರಂಗಸ್ವಾಮಿ. ಜಯರಾಮ್. ಮಾಹದೇವ. ವಿಜಯ ಇನ್ನಿತರರು ಹಾಜರಿದ್ದರು.